ಬೆಂಗಳೂರು : ಜೂ.1 : ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಕುಡಿಯುವ ನೀಡುವ ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಮಹಾರಾಷ್ಟ್ರದ CM ಏಕನಾಥ್ ಶಿಂಧೆ ಅವರಿಗೆ ರಾಜ್ಯದ ಕುಡಿಯುವ ನೀರಿನ ಅಗತ್ಯತೆಗಾಗಿ ವರ್ನಾ/ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುವಂತೆ ಮನವಿ ಮಾಡಿದ್ದಾರೆ.
ಶಿಂಧೆ ಅಲ್ಲದೆ ಮಹಾರಾಷ್ಟ್ರದ DCM ದೇವೇಂದ್ರ ಫಡ್ನವೀಸ್ ಅವರಿಗೂ ಬರೆದಿರುವ ಪತ್ರದಲ್ಲಿ ಸಿದ್ದರಾಮಯ್ಯ ಅವರು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ತೀವ್ರ ಪರಿಸ್ಥಿತಿಯನ್ನು ಉಲ್ಲೇಖಿಸಿದ್ದಾರೆ. ತೀವ್ರ ಬೇಸಿಗೆಯಿಂದಾಗಿ ಈ ವರ್ಷದ ಮಾರ್ಚ್ ತಿಂಗಳಿನಿಂದ ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಕೊರತೆಯನ್ನು ಎದುರಿಸುತ್ತಿವೆ ಎಂದು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.