ಮಡಿಕೇರಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕೊಡಗು(Kodagu) ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ. ಮರೂರು ಗ್ರಾಮದ ನಟೇಶ್ (31) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ನಟೇಶ್ ದಂಪತಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ತಪಾಸಣೆ ನಡೆಸುತ್ತಿದ್ದ ಪೊಲೀಸರನ್ನು ಕಂಡು ನಟೇಶ್ ಆತಂಕಗೊಂಡಿದ್ದಾರೆ. ವಾಹನದ ದಾಖಲೆಗಳು ಇಲ್ಲದ ಕಾರಣ ತಕ್ಷಣವೇ ಬೈಕ್ ತಿರುಗಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಗೂಡ್ಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ನಟೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ ಅವರ ಪತ್ನಿ ದಿವ್ಯಾ ಗಂಭೀರವಾಗಿ ಗಾಯಗೊಂಡಿದ್ದು, ಅವರ ಎರಡೂ ಕಾಲುಗಳು ಮುರಿದಿವೆ ಎಂದು ತಿಳಿದುಬಂದಿದೆ. ಈ ಕುರಿತು ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.






