ಬೆಂಗಳೂರು: ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 3 ರೂ., ಡೀಸೆಲ್ ಬೆಲೆ 3.5 ರೂ. ಹೆಚ್ಚಿಸಿದ್ದಕ್ಕೆ ರಾಜ್ಯಾದ್ಯಂತ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆದಿವೆ.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದ ಬಳಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಇದು ಸರ್ಕಾರದ ಅವಿವೇಕದ ಮತ್ತು ಜನವಿರೋಧಿ ನಿರ್ಧಾರ. ಇಂತಹ ಸಂದರ್ಭದಲ್ಲಿ ನಾವು ವಿಪಕ್ಷವಾಗಿ ಜನರ ಪರವಾಗಿ ಧ್ವನಿ ಎತ್ತಬೇಕಿದೆ. ರಾಜ್ಯದ ರೈತರು, ಬಡವರು, ಜನಸಾಮಾನ್ಯರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನವಿರೋಧಿ ಸರ್ಕಾರ ಮತ್ತು ಜನವಿರೋಧಿ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ 18ರಿಂದ 20 ಸ್ಥಾನ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದ ಕಾಂಗ್ರೆಸ್ ಮುಖಂಡರು ಫಲಿತಾಂಶ ಬಂದ ಬಳಿಕ ಹತಾಶರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಶಾಸಕರೇ ಗ್ಯಾರಂಟಿ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ (Congress) ಸರ್ಕಾರಕ್ಕೆ ಕಳೆದ ಒಂದು ವರ್ಷದ ಅಧಿಕಾರದಲ್ಲಿ ಒಂದೇ ಒಂದು ರೂಪಾಯಿಯ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಅವರ ಶಾಸಕರೇ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ರಸ್ತೆ, ಶಾಲೆಗಳ ಅಭಿವೃದ್ಧಿ, ಆಸ್ಪತ್ರೆಗಳ ವಿಚಾರದಲ್ಲಿಯೂ ರಾಜ್ಯ ಹಿಂದೆ ಉಳಿಯುವಂತಾಗಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ (BJP) ಸರ್ಕಾರ ಇದ್ದಾಗ ಹೆಚ್ಚು ಸಾಲಗಳೂ ಇರಲಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಒಂದೇ ಒಂದು ವರ್ಷದಲ್ಲಿ ಕರ್ನಾಟಕ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಿಜೆಪಿಯ ನಾಯಕರು, ಕಾರ್ಯಕರ್ತರು ಇದ್ದರು.