ಬೆಂಗಳೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಎಸ್ಐಆರ್ ಪ್ರಕ್ರಿಯೆಯನ್ನು ವಿರೋಧಿಸಿ ನವೆಂಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ (Protest) ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ (B.K. Hariprasad) ತಿಳಿಸಿದ್ದಾರೆ.

‘ಇಂಡಿಯಾ’ ಮೈತ್ರಿಕೂಟದ ನಾಯಕರು ಪ್ರಕಟಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ದೆಹಲಿಯ ರಾಮಲೀಲಾ ಮೈದಾನದಲ್ಲಿ ನವೆಂಬರ್ 1ರಂದು ನಡೆದ ಐತಿಹಾಸಿಕ ಹೋರಾಟದ ಮುಂದುವರಿದ ಭಾಗವಾಗಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಯತ್ನಿಸುತ್ತಿವೆ ಎಂದು ಅವರು ಆರೋಪಿಸಿದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಈ ಹೋರಾಟ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ನವೆಂಬರ್ 5ರಂದು ರಾಜಧಾನಿ ಬೆಂಗಳೂರಿನಲ್ಲಿ ಹೋರಾಟ ಆರಂಭಿಸಿ, ನಂತರದ ದಿನಗಳಲ್ಲಿ ಹೋರಾಟವನ್ನು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟಕ್ಕೆ ವಿಸ್ತರಿಸಲಾಗುವುದು ಎಂದು ಹೇಳಿದರು.

ಸಿಇಸಿ ನೇಮಕ ಪ್ರಕ್ರಿಯೆ ಪ್ರಜಾಸತ್ತಾತ್ಮಕವಾಗಿರಲಿ
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಪಿಎಂ ಪಕ್ಷದ ಕಾರ್ಯದರ್ಶಿ ಕೆ. ಪ್ರಕಾಶ್, ಮುಖ್ಯ ಚುನಾವಣಾ ಆಯುಕ್ತರ ನೇಮಕ ಪ್ರಕ್ರಿಯೆಯು ಸಂಪೂರ್ಣ ಪ್ರಜಾಸತ್ತಾತ್ಮಕವಾಗಿರಬೇಕು ಮತ್ತು ಈ ಕುರಿತ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಒತ್ತಾಯಿಸಿದರು. ಮುಖ್ಯ ಚುನಾವಣಾ ಆಯುಕ್ತರಿಗೆ ಶಾಶ್ವತ ವಿನಾಯಿತಿ ನೀಡಿರುವ ಕಾಯ್ದೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು ಹಾಗೂ ಎಸ್ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. ದೇಶವನ್ನು ಸರ್ವಾಧಿಕಾರದ ಕಡೆಗೆ ಕೊಂಡೊಯ್ಯುವ ಮತ್ತು ಕೋಮುವಾದಿ ಹಿಂದುತ್ವ ರಾಷ್ಟ್ರವನ್ನಾಗಿ ಮಾಡಲು ಹೊರಟಿರುವ ಬಿಜೆಪಿಯ ಹುನ್ನಾರಕ್ಕೆ ದೇಶದ ಜನತೆ ಅವಕಾಶ ನೀಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಈ ಹೋರಾಟದ ಮೂಲಕ ರವಾನಿಸಲಾಗುವುದು ಎಂದರು.

ಮೈತ್ರಿಕೂಟದ ಪ್ರಮುಖ ನಾಯಕರ ಉಪಸ್ಥಿತಿ
ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ಎಲ್ಲಾ ವಿರೋಧ ಪಕ್ಷಗಳು ಒಗ್ಗೂಡಿ ಈ ಚಳವಳಿಯನ್ನು ತಳಮಟ್ಟದವರೆಗೆ ಕೊಂಡೊಯ್ಯಲು ನಿರ್ಧರಿಸಿವೆ. ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಪಿಐ ನಾಯಕರಾದ ಸಾಥಿ ಸುಂದರೇಶ್, ಮಹಾಂತೇಶ್, ಫಾರ್ವರ್ಡ್ ಬ್ಲಾಕ್ ಮುಖಂಡರಾದ ಶಿವಶಂಕರ್, ಅಲಿ, ಸಿಪಿಐಎಂಎಲ್ ಪಕ್ಷದ ಕ್ಲಿಫ್ಟನ್ ಡಿ ರೊಜಾರಿಯೋ ಹಾಗೂ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸೇರಿದಂತೆ ಮೈತ್ರಿಕೂಟದ ಹಿರಿಯ ನಾಯಕರು ಭಾಗವಹಿಸಿದ್ದರು.

ಸರ್ಜಾ ಕುಟುಂಬದ ಮದುವೆಗೆ ಮೇಘನಾ ರಾಜ್ ಹೋಗದಿದ್ದುದೇಕೆ? ಕೊನೆಗೂ ಮೌನ ಮುರಿದ ನಟಿ!






