ಮೈಸೂರು: “ದೇಶದಲ್ಲಿ ಮೂರನೇ ಒಂದು ಭಾಗದಷ್ಟು ಆಹಾರ ವ್ಯರ್ಥವಾಗುತ್ತಿದೆ. ನಮಗೆ ತಿನ್ನುವ ಹಕ್ಕಿದೆ, ಆದರೆ ಬಿಸಾಡುವ ಹಕ್ಕಿಲ್ಲ. ಆಹಾರವನ್ನು ವ್ಯರ್ಥ ಮಾಡಬೇಡಿ” ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
ನಾಡಹಬ್ಬ ಮೈಸೂರು ದಸರಾ ಅಂಗವಾಗಿ ನಗರದ ಸ್ಕೌಟ್ ಆಯಂಡ್ ಗೈಡ್ಸ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ದಸರಾ ಆಹಾರ ಮೇಳ ಕಾರ್ಯಕ್ರಮವನ್ನು ಹಾಲು ಉಕ್ಕಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, “ಇಂದು ಆಹಾರ ಮೇಳದಲ್ಲಿ 150 ಮಳಿಗೆಗಳನ್ನು ತೆರೆಯಲಾಗಿದೆ. ಆಹಾರವನ್ನು ಯಾರೂ ಕೂಡ ವ್ಯರ್ಥ ಮಾಡಬಾರದು. ಉಪಯುಕ್ತರು ಆಹಾರ ಬಳಸಿಕೊಳ್ಳಿ. ಹೆಚ್ಚಿನ ರೀತಿ ಆಹಾರ ಪೋಲಾಗುವುದನ್ನು ತಪ್ಪಿಸಿ” ಎಂದರು.
“ಮದುವೆ ಮನೆಗಳು ಮತ್ತು ಶುಭ ಸಮಾರಂಭಗಳಲ್ಲಿ ಹಾಗೂ ಕೆಲವು ಹೋಟೆಲ್ಗಳಲ್ಲಿ ಆಹಾರ ವ್ಯರ್ಥವಾಗುತ್ತಿದೆ. ಮುಂದಿನ ದಿನಗಳಲ್ಲಿ ಆಹಾರ ವ್ಯರ್ಥವಾಗದಂತೆ ಸರ್ಕಾರದಿಂದ ನಿಯಮಾವಳಿಗಳನ್ನು ರೂಪಿಸಿ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ತಿಮ್ಮಯ್ಯ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ, ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್ ಮತ್ತು ಪ್ರಮುಖರು ಭಾಗವಹಿಸಿದ್ದರು.












