ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ನಾಳೆಗೆ (ಆಗಸ್ಟ್ 27) ನೂರು ದಿನ ಪೂರೈಸುತ್ತಿದ್ದು, ಈ ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ ಸಿಗುತ್ತಿದ್ದು, ಸಮಾರಂಭದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

‘ಗೃಹಲಕ್ಷ್ಮಿ’ ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಇಂದು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷ ಬಸವಣ್ಣನ ತತ್ವ ಸಿದ್ದಾಂತದ ಮೇಲೆ ನಿಂತಿದೆ. ಗೃಹಲಕ್ಷ್ಮಿ ಯೋಜನೆಯ1.28 ಕೋಟಿ ಫಲಾನುಭವಿಗಳ ಪೈಕಿ ಈಗಾಗಲೇ 1.10 ಕೋಟಿಗೂ ಅಧಿಕ ಮಹಿಳೆಯರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಆಗಸ್ಟ್ ತಿಂಗಳಿಂದಲೇ ಮನೆಯ ಯಜಮಾನಿಗೆ ಹಣ ಸಂದಾಯವಾಗಲಿದೆ ಎಂದರು.

ಮಹಿಳೆಯರ ಸಬಲೀಕರಣದ ದೃಷ್ಟಿಯಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರುತ್ತಿದ್ದು,ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು, ಜನ ಸಾಮಾನ್ಯರು ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು.ಗೃಹಲಕ್ಷ್ಮಿ ಯೋಜನೆ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲೂ ಯಶಸ್ವಿಯಾಗುವಂತೆ ನೋಡಿಕೊಳ್ಳೋಣ ಎಂದು ಸಚಿವರು ತಿಳಿಸಿದರು.

ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ. ಮಹದೇವಪ್ಪ, ಶಾಸಕರ ಕೆ.ಹರೀಶ್ ಗೌಡ, ಎಐಸಿಸಿ ಕಾರ್ಯದರ್ಶಿ ಹಾಗೂ ಮೈಸೂರು ಉಸ್ತುವಾರಿ ರೋಜಿ ಜಾನ್, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ಸುನೀತಾ ವೀರಪ್ಪ ಗೌಡ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರ್ ನಾಥ್, ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಬಿ.ಜೆ.ವಿಜಯದ ಕುಮಾರ್, ಮೈಸೂರು ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಮಾಜಿ ಮೇಯರ್ ಗಳಾದ ಚಿಕ್ಕಣ್ಣ, ಪುಷ್ಪಲತಾ ಚಿಕ್ಕಣ್ಣ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.