ಹಲವು ವರ್ಷಗಳಿಂದ ಕಾಲೇಜುಗಳಲ್ಲಿ ಪಾಠ ಮಾಡುತ್ತ ಜೀವನ ಸಾಗಿಸುತ್ತಿದ್ದ ಗುರುಗಳು ಇದೀಗ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಹೋರಾಟದ ಹಾದಿ ಹಿಡಿದಿದ್ದಾರೆ. ಸೇವಾ ಭದ್ರತೆ ಜೊತೆಗೆ ಖಾಯಂ ನೇಮಕಾತಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿರುವ ಸಾವಿರಾರು ಉಪನ್ಯಾಸಕರು, ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಈ ಕುರುತು ಟ್ವೀಟ್ ಮಾಡಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ ಅವರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಕೆಲಸ ಮಾಡುತ್ತಿರುವ 14500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ಮಾಸಿಕ 11000 ರಿಂದ 13000 ಗೌರವ ಧನ ನೀಡಲಾಗುತ್ತಿದೆ. ಇದು ಸರಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆ ಎಂದು ಕಿಡಿಕಾರಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ ಸರಕಾರ. ಭಾರತ ವಿಶ್ವಗುರು ಆಗಬೇಕು ಎನ್ನುತ್ತಾರೆ ಉನ್ನತ ಶಿಕ್ಷಣ ಸಚಿವರು. ಸ್ವತಃ ಪ್ರಧಾನಿಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ? ಎಂದು ಪ್ರಶ್ನಿಸಿದ್ದಾರೆ.
ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಆಗ್ರಹ ಮಾಡುತ್ತೇನೆ ಎಂದು ಬೊಮ್ಮಾಯಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.