ನವದೆಹಲಿ: ಸತತ ಮೂರನೇ ಬಾರಿ ನರೇಂದ್ರ ಮೋದಿ ಜೂನ್ 9ರಂದು ಭಾನುವಾರ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಕುರಿತು ರಾಷ್ಟ್ರಪತಿ ಭವನದಿಂದ ಅಧಿಕೃತ ಮಾಹಿತಿ ಸಿಕ್ಕಿದೆ. ರಾಷ್ಟ್ರಪತಿ ಭವನದಲ್ಲಿ ಜೂನ್ 9 ರಂದು ಸಂಜೆ 7.15 ಕ್ಕೆ ರಾಷ್ಟ್ರಪತಿಗಳು ಪ್ರಧಾನ ಮಂತ್ರಿ ಮತ್ತು ಕೇಂದ್ರ ಮಂತ್ರಿ ಮಂಡಳಿಯ ಇತರ ಸದಸ್ಯರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ರಾಷ್ಟ್ರಪತಿಗಳ ಅಧಿಕೃತ ಸಾಮಾಜಿಕ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ.
ಭಾನುವಾರ ಮೋದಿ ಅವರೊಂದಿಗೆ ಕೆಲವು ನೂತನ ಸಂಸದರು ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಎನ್ ಡಿಎ ಇನ್ನಿತರ ಪ್ರಮುಖ ಪಕ್ಷಗಳಾದ ಟಿಡಿಪಿ ಹಾಗೂ ಜೆಡಿಯುನ ತಲಾ ಮೂವರು ಸಚಿವರಾಗಬಹುದು ಎನ್ನಲಾಗುತ್ತಿದೆ.
ಈ ಕಾರ್ಯಕ್ರಮಕ್ಕೆ ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಸೀಷೆಲ್ಸ್ ಅಧ್ಯಕ್ಷ ವಾವೆಲ್ ರಾಮ್ ಕಾಲಾವನ್, ಭೂತಾನ್ ಪ್ರಧಾನಿ ತ್ಶೆರಿಂಗ್ ತೋಗ್ಬೆ, ಮಾರಿಷಸ್ ಪ್ರಧಾನಿ ಪ್ರವೀಂದ್ ಜುಗನ್ನಾಥ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಹಾಗೂ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಸೇರಿದಂತೆ ಹಲವು ವಿದೇಶಿ ಗಣ್ಯರು ಆಗಮಿಸುವ ಸಾಧ್ಯತೆ ಇದೆ.