ಬೆಂಗಳೂರು: ಪಾಕಿಸ್ತಾನ ಮತ್ತು ಚೀನಾ ಭಾರತದ ಶತ್ರು ರಾಷ್ಟ್ರಗಳಲ್ಲ, ಪಾಕಿಸ್ತಾನದ ಬಗ್ಗೆ ದೀರ್ಘಕಾಲ ದ್ವೇಷ ಬೆಳೆಸಬಾರದು ಎಂಬ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡರು, ಆರ್ಎಸ್ಎಸ್ ಬಿಜೆಪಿಯ ಪ್ರಮುಖ ಆಧಾರ ಸ್ತಂಭವಾಗಿದ್ದು, ಆರ್ಎಸ್ಎಸ್ ನೀಡುವ ಸೂಚನೆಗಳನ್ನು ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಪಾಲಿಸುತ್ತಿವೆ ಎಂದು ಆರೋಪಿಸಿದರು.

ಪಾಕಿಸ್ತಾನದ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ ಪಡೆಯುತ್ತಿದ್ದ ಬಿಜೆಪಿ ನಾಯಕರು, ಇದೀಗ ಮೋಹನ್ ಭಾಗವತ್ ಅವರು ಪಾಕಿಸ್ತಾನದ ಬಗ್ಗೆ ಸೌಹಾರ್ದದ ಮಾತುಗಳನ್ನು ಆಡಿರುವ ಸಂದರ್ಭದಲ್ಲಿ ಏಕೆ ಪ್ರತಿಕ್ರಿಯಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.ಮೋಹನ್ ಭಾಗವತ್ ಅವರ ಹೇಳಿಕೆಯಲ್ಲಿ ಯಾವುದೇ ರಾಜಕೀಯ ಉದ್ದೇಶ ಅಥವಾ ತಂತ್ರ ಅಡಗಿದೆಯೇ ಎಂಬುದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಶೀಲಿಸಬೇಕು. ಈ ಕುರಿತು ಸೂಕ್ತ ತನಿಖೆ ನಡೆಸಿ ಸತ್ಯಾಂಶವನ್ನು ಜನರ ಮುಂದೆ ಬಹಿರಂಗಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕೇಂದ್ರ ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡರು, ದೇಶದಲ್ಲಿ ಯುವಕರು ವಿವಿಧ ವಿಚಾರಗಳ ಕುರಿತು ಹೋರಾಟ ನಡೆಸುತ್ತಿರುವ ಸಂದರ್ಭದಲ್ಲಿ ಆರ್ಎಸ್ಎಸ್ ಮುಖ್ಯಸ್ಥರ ಈ ಹೇಳಿಕೆ ಚರ್ಚೆಗೆ ಕಾರಣವಾಗಿದೆ ಎಂದು ಹೇಳಿದರು.

ಪ್ರತಿಭಟನೆಯ ನೇತೃತ್ವವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ವಹಿಸಿದ್ದರು. ಪ್ರಕಾಶ್ ಜಿ., ಹೇಮರಾಜು, ಆನಂದ್ ಕುಮಾರ್, ಎಂ.ಎಸ್. ಮುರುಳಿ, ಉಮೇಶ್, ಓಬಳೇಶ್, ಪುಟ್ಟರಾಜು, ಕುಶಲ್, ಹರವೇಗೌಡ, ರಂಜಿತ್, ಮಾಧವ ಹನೂರು, ಶಾಹಿನ್ ಷರೀಫ್, ನವೀನ್, ಅಜಯ್, ಕಿಶೋರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.






