ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು(Hiriyuru) ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಸುಕಿನ ಜಾವ 2 ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ(Accident) ೧೧ ಮಂದಿ ಸಜೀವ ದಹನವಾಗಿದ್ದಾರೆ.

ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ, ಎದುರಿನಿಂದ ಬರುತ್ತಿದ್ದ ಲಾರಿ ಡಿವೈಡರ್ ಹಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ತಕ್ಷಣ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಈ ವೇಳೆ ಬಸ್ ನಲ್ಲಿದ್ದ 9 ಮಂದಿ ಪ್ರಯಾಣಿಕರು ಹಾಗೂ ಲಾರಿಯ ಡ್ರೈವರ್ ಮತ್ತು ಕ್ಲೀನರ್ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಮೆಜೆಸ್ಟಿಕ್‌ನಿಂದ ರಾತ್ರಿ 9 ಗಂಟೆಗೆ ಹೊರಟಿದ್ದ ಖಾಸಗಿ ಸೀಬರ್ಡ್ ಸ್ಲೀಪರ್ ಬಸ್, ಶಿವಮೊಗ್ಗ ಮತ್ತು ಹೊನ್ನಾವರ ಮಾರ್ಗವಾಗಿ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ತೆರಳುತ್ತಿತ್ತು. 32 ಆಸನ ಸಾಮರ್ಥ್ಯದ ಬಸ್‌ನಲ್ಲಿ 29 ಪ್ರಯಾಣಿಕರ ಜೊತೆ ಡ್ರೈವರ್ ಮತ್ತು ಕ್ಲೀನರ್ ಇದ್ದರು.

ಅಪಘಾತದ ಮಾಹಿತಿ ದೊರೆತ ತಕ್ಷಣ ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದರು. ಬದುಕುಳಿದವರನ್ನ ಹಿರಿಯೂರು, ಶಿರಾ ಮತ್ತು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನು ಮೃತದೇಹಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಗುರುತು ಪತ್ತೆ ಹಚ್ಚುವುದು ಕಷ್ಟಕರವಾಗಿದೆ. ಘಟನೆಗೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.







