ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅತಿಹೆಚ್ಚು ಮಹಿಳೆಯರಿಗೆ ಅವಕಾಶ ಕೊಡಬೇಕು ಎಂದು ಮಾಜಿ ಸಚಿವೆ ಉಮಾಶ್ರೀ ಅವರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಲ್ಲಿ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಮಹಿಳಾ ಘಟಕದಿಂದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನ `ನಾ ನಾಯಕಿ’ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರು ಅರಮನೆ ಮೈದಾನದಲ್ಲಿ ಜನವರಿ 16ರಂದು `ನಾ ನಾಯಕಿ’ ಸಮಾವೇಶ ನಡೆಯಲಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದಾರೆ. ಅಲ್ಲದೇ ಕಾಂಗ್ರೆಸ್ನ ಮಾಜಿ ಮಹಿಳಾ ಶಾಸಕರು, ಹಾಲಿ ನಾಯಕಿರೂ ಸೇರಿದಂತೆ ಎಲ್ಲರೂ ಬರಲಿದ್ದಾರೆ. ಇದೇ ವೇಳೆ ಮಹಿಳಾ ಘಟಕದ ಹಲವು ಬೇಡಿಕೆಗಳನ್ನ ಮುಂದಿಡಲಿದ್ದೇವೆ ಎಂದು ತಿಳಿಸಿದ್ದಾರೆ.
ಈ ಬಾರಿ ವಿಧಾನಸಭೆ ಚುನಾವಣೆಗೆ 109 ಮಹಿಳೆಯರು ಟಿಕೆಟ್ ಆಕಾಂಕ್ಷಿಗಳಾಗಿ ಅರ್ಜಿ ಹಾಕಿದ್ದಾರೆ. ಈ ಬಾರಿ ಕಾಂಗ್ರೆಸ್ ನಿಂದ ಹೆಚ್ಚು ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡಬೇಕು. ಈ ಬಗ್ಗೆ `ನಾ ನಾಯಕಿ’ ಪ್ರಿಯಾಂಕಾ ಗಾಂಧಿ ಅವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.