
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತ ಎಸ್ಪಿ ಉದೇಶ್ ನೇತೃತ್ವದ ಅಧಿಕಾರಿಗಳ ತಂಡ ಸಿಎಂ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನವೆಂಬರ್ 6ರಂದು ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದರು.
ತಮ್ಮ 40 ವರ್ಷಗಳ ಸುದೀರ್ಘ ರಾಜಕೀಯ ಇತಿಹಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ಪ್ರಕರಣವೊಂದರಲ್ಲಿ ಆರೋಪಿಯಾಗಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ಇನ್ನು, ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ 2ನೇ ಆರೋಪಿ ಹಾಗೂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಮೂರನೇ ಆರೋಪಿ ಹಾಗೂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ಪ್ರಕರಣದ 4ನೇ ಆರೋಪಿ ದೇವರಾಜು ಸೇರಿದಂತೆ ಮುಡಾ ಅಧಿಕಾರಿಗಳನ್ನು ಈಗಾಗಲೇ ಲೋಕಾಯುಕ್ತ ತನಿಖಾ ತಂಡ ವಿಚಾರಣೆ ನಡೆಸಿದೆ.
ಇನ್ನು, ಮುಡಾ ಹಗರಣ ಸಂಬಂಧ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.