ಮಠದ ವಸತಿ ನಿಲಯದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ನ್ಯಾಯಾಂಗ ಬಂಧನ ಮತ್ತೆ 11 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.
ಸೋಮವಾರ ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ ಅಂತ್ಯವಾಗಿದ್ದರಿಂದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಇದೀಗ ಮತ್ತೆ ಅಕ್ಟೋಬರ್ 21ರ ತನಕ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಸೆಪ್ಟೆಂಬರ್ 28ರಂದು ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡಿದ್ದರಿಂದ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಅಂದು ಕೂಡ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಆದೇಶಿಸಿದ್ದರು.

ಮುರಾಘ ಶ್ರೀಗಳಿಗೆ ಜಾಮೀನು ಸಿಗಬಹುದು ಎಂದು ನಿರೀಕ್ಷೆ ಇತ್ತು. ಆದರೆ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದ್ದು, ಶರಣರು ಮತ್ತಷ್ಟು ದಿನ ಜೈಲಲ್ಲೆ ಕಳೆಯುವಂತಾಗಿದೆ.
ಪ್ರಕರಣದ ಎರಡನೇ ಆರೋಪಿ ಹಾಸ್ಟೆಲ್‌ನ ಮಹಿಳಾ ವಾರ್ಡನ್ ರಶ್ಮಿ ನ್ಯಾಯಾಂಗ ಬಂಧನ ಅವಧಿ ಕೂಡ ಅಂತ್ಯವಾಗಿತ್ತು. ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರನ್ನು ಕೂಡ ಅಕ್ಟೋಬರ್ 21ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ.