ಬೆಂಗಳೂರು : ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಆದರೆ, ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದಿದ್ದರೆ, ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ, ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಲಿಂಗ ಅಸಮಾನತೆಯ ಜೊತೆಯಲ್ಲಿ ಜಾತಿ ಅಸಮಾನತೆಯನ್ನೂ ಒಳಗೊಂಡಿರುವ ಭಾರತೀಯ ಸಮಾಜದಲ್ಲಿ ಹಿಂದುಳಿದ ಜಾತಿಗಳಿಗೆ ಸೇರಿದ ಮಹಿಳೆಯರು ರಾಜಕೀಯವಾಗಿ ಉಳಿದವರ ಜೊತೆ ಪೈಪೋಟಿ ನಡೆಸಿ ಪ್ರಾತಿನಿಧ್ಯ ಪಡೆಯುವಂತಹ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಾಮರ್ಥ್ಯ ಇಲ್ಲದಿರುವುದನ್ನು ನಾವು ಗಮನಿಸಬೇಕಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಈಗಾಗಲೇ ರಾಜಕೀಯ ಮೀಸಲಾತಿ ಇರುವುದರಿಂದ ಆ ಸಮುದಾಯಗಳ ಮಹಿಳೆಯರಿಗೆ ಮೀಸಲಾತಿ ನೀಡುವುದು ಸಮಸ್ಯೆಯಾಗಲಾರದು ಎಂದಿದ್ದಾರೆ.