
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಶುಕ್ರವಾರ ಈ ಕುರಿತು, ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಟಿ.ಜೆ. ಅಬ್ರಹಾಂ ನೀಡಿದ್ದ ದೂರನ್ನು ತಿರಸ್ಕರಿಸುವಂತೆ ಸಚಿವ ಸಂಪುಟ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು.
ಪ್ರಾಸಿಕ್ಯೂಷನ್ಗೆ ಕ್ಯಾಬಿನೆಟ್ ನಿಂದ ಉತ್ತರ ಕೊಟ್ಟಿದ್ದೇವೆ. ಆರ್ಟಿಐ ಕಾರ್ಯಕರ್ತ ಟಿ.ಜೆ. ಅಬ್ರಹಾಂ ನೀಡಿದ್ದ ದೂರನ್ನು ತಿರಸ್ಕರಿಸಲು ಕ್ಯಾಬಿನೆಟ್ ನಿರ್ಧಾರ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೇವಲ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಯವರ ವಿರುದ್ದ ಕೇಳಿಬಂದಿದ್ದ ದೂರಿನ ಕುರಿತು ವರದಿ ನೀಡುವಂತೆ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಸರ್ಕಾರ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದರು. ಇದರಿಂದ ಕಾಂಗ್ರೆಸ್ ಪಾಳೆಯದಲ್ಲಿ ತಲ್ಲಣ ಉಂಟಾಗಿತ್ತು. ಒಂದು ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ದಾಖಲಾದರೆ ಪಕ್ಷದ ವರ್ಚಸ್ಸಿಗೆ ಧಕ್ಕೆ ಬರುವುದೆಂದು ಕಾಂಗ್ರೆಸ್ ಶಾಸಕರು ಆತಂಕ ವ್ಯಕ್ತಪಡಿಸಿದ್ದರು.
ಮುಡಾ ಹಗರಣವನ್ನು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದವು. ಇದಕ್ಕೆ ತಿರುಗೇಟು ನೀಡುವ ಸಲುವಾಗಿ ಬಿಜೆಪಿ ಹಗರಣಗಳನ್ನು ಪ್ರಶ್ನಿಸಲು ರಾಜ್ಯಾದ್ಯಂತ ಸಭೆ ನಡೆಸಲು ಕಾಂಗ್ರೆಸ್ ತೀರ್ಮಾನಿಸಿತ್ತು.