ಬೆಂಗಳೂರು : ಪಂಚಾಯಿತಿಯಿಂದ ಸಂಸತ್ತಿನವರಿಗೆ ಹೊಸ ನಾಯಕತ್ವ ಅಗತ್ಯ. ಅದರಲ್ಲಿಯೂ ಮಹಿಳೆಯರು ನಾಯಕತ್ವ ವಹಿಸಿಕೊಳ್ಳಬೇಕು. ಇದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಮಾಜಿ ಸಚಿವ ಹಾಗೂ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ. ಜಿ. ಆರ್. ಸಿಂಧ್ಯಾ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ರಾಜಾಜಿನಗರದ ವಿದ್ಯಾವರ್ಧಕ ಶಾಲೆಯಲ್ಲಿ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದೆ ಎಂದು ಹಳೆಯ ದಿನಗಳನ್ನು ಸ್ಮರಿಸಿದ್ದಾರೆ. ಸಿಂಧ್ಯಾ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ವತಿಯಿಂದ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ಪಾಲ್ಗೊಂಡಿರುವ ವಿದ್ಯಾರ್ಥಿಗಳಿಗೆ ಇಂಜಿನಿಯರ್ ಹಾಗೂ ವೈದ್ಯಕೀಯ ಸೀಟುಗಳ ಮೀಸಲಾತಿಯನ್ನು ಏರಿಕೆ, ನಿವೃತ್ತ ನೌಕರರಿಗೆ ಪಿಂಚಣಿ ಬಿಡುಗಡೆಗೆ ಇದೇ ವೇಳೆ ಮನವಿ ಸಲ್ಲಿಸಿದ್ದಾರೆ.

ಧಾರವಾಡ ಮತ್ತು ವಿಜಯಪುರದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಸ್ಥಳದ ಗುತ್ತಿಗೆ ಅವಧಿ ಮುಗಿದಿದ್ದು ಅವಧಿಯನ್ನು ಮುಂದುವರೆಸಬೇಕೆಂದು ಕೋರಿದರು. ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುದಾನ ಬಿಡುಗಡೆಗೆ ಕೂಡ ಮನವಿ ಮಾಡಿದಾಗ, ಮುಖ್ಯಮಂತ್ರಿಗಳ ವಿವೇಚನಾ ಅಧಿಕಾರದಡಿ ಬಿಡುಗಡೆ ಮಾಡುವಂತೆ ಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.






