ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ (Hardeep Singh Nijjar Murder Case) ಕೆನಡಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಶನಿವಾರ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕೆನಡಿಯನ್ ಮೌಂಟೆಡ್ ಪೊಲೀಸ್ (Canadian Police) ಅಧಿಕಾರಿಗಳ ತಂಡ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಆಲ್ಬರ್ಟಾದ ಎಡ್ಮಂಟಡ್ ನಗರದಲ್ಲಿ ಮೂವರನ್ನು ಬಂಧಿಸಲಾಗಿದೆ. ಕರಣ್ ಪ್ರೀತ್ ಸಿಂಗ್ (28), ಕಮಲ್ ಪ್ರೀತ್ ಸಿಂಗ್ (22) ಹಾಗೂ ಕರಣ್ ಬ್ರಾರ್ (22) ಎಂದು ಗುರುತಿಸಲಾಗಿದೆ. ಆರೋಪಿಗಳೆಲ್ಲ ಭಾರತ ಮೂಲದವರು ಎನ್ನಲಾಗಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸರು, ನಿಜ್ಜರ್ ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. ಸಾಕ್ಷ್ಯದ ರೂಪದ ಕುರಿತು ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ. ಹತ್ಯೆಯ ಹಿಂದಿನ ಕಾರಣ ತನಿಖೆ ನಂತರ ತಿಳಿಯಲಿದೆ ಎಂದು ಹೇಳಿದ್ದಾರೆ.
ಹಿಂದಿನ ವರ್ಷ ಜೂನ್ 18ರಂದು ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಾಗಿದ್ದ. ಇದರ ಹಿಂದೆ ಭಾರತದ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಆರೋಪ ಕೂಡ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಶುರುವಾಗಿತ್ತು. 40 ಉಗ್ರರ ಪಟ್ಟಿಯಲ್ಲಿ ಹರ್ದೀಪ್ ಸಿಂಗ್ ನಿಜ್ಜರ್ ಪ್ರಮುಖ ಉಗ್ರನಾಗಿದ್ದ.