ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಎದುರು ಯಾರೇ ಅಭ್ಯರ್ಥಿಯಾದರೂ ಅವರ ವಿರುದ್ಧ 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಆರ್.ವರ್ತೂರ್ ಪ್ರಕಾಶ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯಿಂದ ಟಿಕೆಟ್ ಘೋಷಣೆ ಬಳಿಕ ಕೋಲಾರದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ ಆರ್.ವರ್ತೂರು ಪ್ರಕಾಶ್ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಕೋಲಾರದಲ್ಲಿ ಸಿದ್ದರಾಮಯ್ಯ ಅಭ್ಯರ್ಥಿಯಾದರೆ ಇನ್ನೂ 10 ಸಾವಿರ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ. ಬಿಜೆಪಿಗೆ ಸೇರಿದ ನಂತರ ನನಗೆ ಆನೆ ಬಲ ಬಂದಂತಾಗಿದೆ. ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಬಿಜೆಪಿ ಹೈಕಮಾಂಡ್ ಸೇರಿದಂತೆ ಎಲ್ಲ ಬಿಜೆಪಿ ನಾಯಕರಿಗೆ ಧನ್ಯವಾದ ಅರ್ಪಿಸಿದರು.

ಕೋಲಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಸ್ತಿತ್ವ ಇಲ್ಲ. ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಚುನಾವಣೆ ನಡೆಯಲಿದೆ. ಕೋಲಾರದಲ್ಲಿ ಮಾತ್ರವಲ್ಲದೆ ಹಿಂದುಳಿದ ವರ್ಗಗಳು ರಾಜ್ಯದಲ್ಲಿ ಎಲ್ಲೆಲ್ಲಿ ಇವೆಯೋ ಅಲ್ಲೆಲ್ಲಾ ಪ್ರವಾಸ ಮಾಡಿ ಬಿಜೆಪಿ ಪಕ್ಷಕ್ಕೆ ಹೆಚ್ಚಿನ ಮತಗಳು ಬರುವಂತೆ ಚುನಾವಣಾ ಪ್ರಚಾರ ಮಾಡುತ್ತೇನೆ. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಹೇಳಿದರು.
ಬಿಜೆಪಿ ಹೈಕಮಾಂಡ್ ಅನುಮತಿ ಕೊಟ್ಟರೆ ಕೋಲಾರದಲ್ಲಿ ಸಮಾವೇಶ ಮಾಡುತ್ತೇನೆ. ಆದ್ರೆ ಕಾಂಗ್ರೆಸ್ ನವರು ಮಾಡಿದಂತೆ ಕೇವಲ 5 ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡುವುದಿಲ್ಲ. ನಾನು, ಸಂಸದ ಮುನಿಸ್ವಾಮಿ ಅವರು ಸೇರಿ 1 ಲಕ್ಷಕ್ಕೂ ಅಧಿಕ ಜನರನ್ನು ಸೇರಿಸಿ ಸಮಾವೇಶ ಮಾಡುವುದಾಗಿ ಹೇಳಿದರು.