ಪ್ರಧಾನಿ ನರೇಂದ್ರ ಮೋದಿ ಉಪನಾಮದ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡಲು ಸೂರತ್ ಕೋರ್ಟ್ ನಿರಾಕರಿಸಿದೆ. ಈ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. 2019ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡಿದ್ದ ರಾಹುಲ್ ಗಾಂಧಿ, ʻಮೋದಿ ಎಂಬ ಹೆಸರು ಹೊಂದಿರುವವರೆಲ್ಲರೂ ಕಳ್ಳರುʼ ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ರಾಹುಲ್, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು. ಈ ಹಿನ್ನೆಲೆ 2019ರ ಏಪ್ರಿಲ್ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧ ಗುಜರಾತ್ನ ಸೂರತ್ ನ್ಯಾಯಾಲಯವು ಮಾರ್ಚ್ 23 ರಂದು ಮಹತ್ವದ ತೀರ್ಪು ನೀಡಿತ್ತು. ಎರಡೂ ಕಡೆಯ ವಾದಗಳನ್ನೂ ಆಲಿಸಿದ್ದ ನ್ಯಾಯಾಲಯ ರಾಹುಲ್ ಗಾಂಧಿಯವರನ್ನು ದೋಷಿ ಎಂದು ತೀರ್ಪು ನೀಡಿತ್ತು. ಅಲ್ಲದೆ, 2 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂಪಾಯಿ ದಂಡವನ್ನು ವಿಧಿಸಿತ್ತು. ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿ, 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ತೀರ್ಪು ನೀಡಿತ್ತು.ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಅವರು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ಏಪ್ರಿಲ್ 13ರಂದು ಮೇಲ್ಮನವಿ ಸಲ್ಲಿಸಿದ್ದರು. ಅವರ ಶಿಕ್ಷೆ ಮುಂದುವರಿಯಲಿದೆಯೇ ಅಥವಾ ಅದಕ್ಕೆ ತಡೆ ಬೀಳಲಿದೆಯೇ ಎನ್ನುವುದು ನ್ಯಾಯಾಲಯದ ತೀರ್ಪಿನ ಮೇಲೆ ಅವಲಂಬಿತವಾಗಿತ್ತು. ಆದರೆ ಅಲ್ಲಿ ಅವರ ಅರ್ಜಿ ತಿರಸ್ಕೃತಗೊಂಡಿರುವುದರಿಂದ ಅವರ ಸಂಸತ್ ಸದಸ್ಯತ್ವ ಅನರ್ಹತೆ ಮುಂದುವರಿಯಲಿದೆ.