ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗುವಂತಹ ಘಟನೆ ಬೆಳಕಿಗೆ ಬಂದಿದೆ. ಮುರ್ಷಿದಾಬಾದ್ ಜಿಲ್ಲೆಯ ಭರತ್‌ಪುರ ಕ್ಷೇತ್ರದ ಶಾಸಕ ಹುಮಾಯೂನ್ ಕಬೀರ್ ಅವರು ಬಿಜೆಪಿ ನಾಯಕ ಶುಭೇಂದು ಅಧಿಕಾರಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದಾರೆ.
ಬಾಂಗ್ಲಾದೇಶದ “Face The People” ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಬ್ಬ ಮುಸ್ಲಿಮನ ಮೇಲಾದರೂ ಅನ್ಯಾಯವಾದರೆ ಸುಮ್ಮನಿರುವುದಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ನೀಡಿದ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈ ಹೇಳಿಕೆ ಕೇವಲ ರಾಜಕೀಯ ಟೀಕೆಯಷ್ಟೇ ಅಲ್ಲದೆ, ಜೀವ ಬೆದರಿಕೆಯ ಸ್ವರೂಪ ಪಡೆದುಕೊಂಡಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಹಲವು ವಲಯಗಳಿಂದ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.ಇದೇ ವೇಳೆ, ಬಂಗಾಳದಲ್ಲಿ ಬಾಬರಿ ಮಸೀದಿ ಕುರಿತ ಉಲ್ಲೇಖವೂ ನಡೆದಿರುವುದಾಗಿ ವರದಿಯಾಗಿದೆ. ಈ ಹೇಳಿಕೆಗಳ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಪ್ರಚೋದನಕಾರಿ ಪ್ರತಿಕ್ರಿಯೆಗಳು ಕಾಣಿಸಿಕೊಂಡಿದ್ದು, ಕೋಮು ಸೂಕ್ಷ್ಮತೆಯ ವಾತಾವರಣ ಮತ್ತಷ್ಟು ಗಂಭೀರವಾಗುವ ಆತಂಕ ವ್ಯಕ್ತವಾಗಿದೆ.

ಬಿಜೆಪಿ ಕಾರ್ಯಕರ್ತರು ಹಾಗೂ ಶುಭೇಂದು ಅಧಿಕಾರಿ ಬೆಂಬಲಿಗರು ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ಸಂಬಂಧಪಟ್ಟ ಶಾಸಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈ ಬೆಳವಣಿಗೆ ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಉದ್ವಿಗ್ನವಾಗಿರುವ ರಾಜಕೀಯ ವಾತಾವರಣಕ್ಕೆ ಮತ್ತಷ್ಟು ಕಿಚ್ಚು ಹಚ್ಚಿದಂತಾಗಿದೆ.






