ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್( Ajith Pawar) ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟದ ಡಿಸಿಎಂ ಡಿ.ಕೆ ಶಿವಕುಮಾರ್ (D.K. Shivakumar )ʼ ಅಜಿತ್ ಪವಾರ್ ಅವರ ಸಾವು ಆಘಾತಕಾರಿ. ಅವರ ಸಾವಿನ ಸುದ್ದಿ ಕೇಳಿ ನನಗೂ ಗಾಬರಿಯಾಯಿತು. ರಾಜಕಾರಣಿಗಳಾದ ನಾವುಗಳು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಪ್ರಯಾಣ ಮಾಡುವಾಗ ಹುಷಾರಾಗಿ ಇರಬೇಕು. ಹೀಗೆ ಅನೇಕ ನಾಯಕರನ್ನು ನಾವು ಕಳೆದುಕೊಂಡಿದ್ದೇವೆʼ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಂತ ಪ್ರಗತಿಪರ ಆಲೋಚನೆ ಹೊಂದಿದ್ದಂತಹ ನಾಯಕ ಅಜಿತ್ ಪವಾರ್ ಅವರು. ಎಲ್ಲಾ ಕೆಲಸಗಳಿಗೂ ಸಹಕಾರ ಕೊಡುತ್ತಿದ್ದಾರೆ ಎಂದು ಮೊನ್ನೆಯಷ್ಟೇ ಮಹಾರಾಷ್ಟ್ರ ಮುಖ್ಯಮಂತ್ರಿಯವರು ಹೇಳಿದ್ದರು. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬ ವರ್ಗ ಹಾಗೂ ಬೆಂಬಲಿಗರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ. ಅವರ ಕುಟುಂಬಸ್ಥರು ಬೆಂಗಳೂರಿನಲ್ಲೂ ನೆಂಟಸ್ಥಿಕೆ ಬೆಳೆಸಿದ್ದಾರೆ. ಮಂಗಳವಾರ ಅವರ ಸಂಬಂಧಿಕರನ್ನು ಭೇಟಿ ಮಾಡಿದ್ದೆ ಎಂದರು.

ಇತ್ತೀಚೆಗೆ ಹೆಚ್ಚು ವಿಮಾನ ಅಪಘಾತಗಳು ಹಾಗೂ ತಾಂತ್ರಿಕ ದೋಷ ಹೆಚ್ಚಾಗುತ್ತಿರುವ ಬಗ್ಗೆ ಮಾತನಾಡಿದ ಡಿ.ಕೆ ಶಿವಕುಮಾರ್, ಇದರ ಬಗ್ಗೆ ವಿಸ್ತೃತ ವರದಿ ಬಂದ ನಂತರ ಮಾತನಾಡುತ್ತೇನೆ. ತಾಂತ್ರಿಕ ದೋಷದ ಬಗ್ಗೆ ನನಗೆ ಏನು ಗೊತ್ತು. ಮುಂಬೈನ ಗೆಳೆಯರು ಸೇರಿದಂತೆ ಹಲವರು ವಿಷಯ ತಿಳಿಸಿದ್ದಾರೆ ಎಂದರು.

ಆರ್.ಬಿ.ತಿಮ್ಮಾಪುರ ಅವರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿರುವ ಬಗ್ಗೆ ಮಾತನಾಡಿದ ಅವರು, ನನ್ನ ಪ್ರಕಾರ ಆರ್.ಬಿ. ತಿಮ್ಮಾಪುರ ಅವರಿಗೂ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎನಿಸುತ್ತದೆ. ವಿಪಕ್ಷಗಳು ಬೇಕಂತಲೇ ಉತ್ಪ್ರೇಕ್ಷೆ ಮಾಡುತ್ತಿವೆ. ಇದರ ಬಗ್ಗೆ ಮುಖ್ಯಮಂತ್ರಿಯವರ ಬಳಿ ವಿವರವಾಗಿ ಮಾತನಾಡಿ ಆನಂತರ ತಿಳಿಸುತ್ತೇನೆ. ರಾಜಕೀಯ ಷಡ್ಯಂತ್ರ ನಡೆಯುತ್ತಿದೆ ಎಂದರು.






