ಧಾರವಾಡ: ರೈತರಿಗೆ ಸರ್ಕಾರದ ಯೋಜನೆಗಳ ಕುರಿತು ಸಮರ್ಪಕ ಮಾಹಿತಿ ತಲುಪಿಸುವುದರ ಜೊತೆಗೆ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸೂಚನೆ ನೀಡಿದರು.ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಬರ ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಯಲ್ಲಿ ಯಾವುದೇ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಸಗೊಬ್ಬರ ವಿತರಣಾ ಕೇಂದ್ರಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ನಿಗದಿತ ದರದಲ್ಲಿಯೇ ರಸಗೊಬ್ಬರ ವಿತರಣೆ ಆಗುವಂತೆ ನೋಡಿಕೊಳ್ಳಬೇಕು. ರೈತರಿಗೆ ಅಗತ್ಯ ಮಾಹಿತಿ ನೀಡುವ ಫಲಕಗಳನ್ನು ಕೂಡ ಅಳವಡಿಸಬೇಕು ಎಂದು ತಿಳಿಸಿದರು.

ಕಲಘಟಗಿ ತಾಲೂಕಿನಲ್ಲಿ ಈಗಾಗಲೇ ಶೇ.85ರಷ್ಟು ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು, ಉಳಿದ ಶೇ.15ರಷ್ಟು ಸಮೀಕ್ಷೆಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಸಚಿವರು ಸೂಚಿಸಿದರು. ಬೆಳೆ ದರ್ಶಕ ಆ್ಯಪ್ನಲ್ಲಿ ದಾಖಲಾಗುವ ಮಾಹಿತಿಯು ನಿಖರವಾಗಿರಬೇಕು. ತಪ್ಪು ಮಾಹಿತಿ ದಾಖಲಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.
ಕಲಘಟಗಿ ಭಾಗದ ರೈತರು ಅಡಿಕೆ, ಬಾಳೆ, ಕಬ್ಬು, ಗೋವಿನಜೋಳ ಹಾಗೂ ಕಾಳುಮೆಣಸು ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳತ್ತ ಗಮನ ಹರಿಸಬೇಕು. ಈ ಕುರಿತು ರೈತರಿಗೆ ಕರಪತ್ರಗಳ ಮೂಲಕ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಹಿನ್ನೆಲೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು. ಕಲಘಟಗಿ ತಾಲೂಕಿನ 16 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು, ಈಗಾಗಲೇ 11 ಬೋರ್‌ವೆಲ್‌ಗಳನ್ನು ಕೊರೆಸಲಾಗಿದ್ದು, 8 ಬೋರ್‌ವೆಲ್‌ಗಳಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಉಳಿದ ಗ್ರಾಮಗಳಿಗೂ ಶೀಘ್ರ ನೀರು ಪೂರೈಕೆ ಮಾಡುವಂತೆ ಸೂಚಿಸಿದರು.

ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳ ಶಿಥಿಲಗೊಂಡ ಕಟ್ಟಡಗಳನ್ನು ತಕ್ಷಣ ದುರಸ್ತಿಗೊಳಿಸಬೇಕು. ಅಪಾಯಕಾರಿಯಾದ ಕಟ್ಟಡಗಳಲ್ಲಿ ಮಕ್ಕಳನ್ನು ಕೂರಿಸಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಕಲಘಟಗಿ ತಾಲೂಕು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.98.63 ಫಲಿತಾಂಶ ದಾಖಲಿಸಿರುವುದನ್ನು ಅಭಿನಂದಿಸಿದ ಅವರು, ಶಿಕ್ಷಣದ ಗುಣಮಟ್ಟ ಮತ್ತಷ್ಟು ಹೆಚ್ಚಿಸಲು ಸೂಚಿಸಿದರು.
ತೆರಿಗೆ ವಸೂಲಾತಿಯಲ್ಲಿ ಕಲಘಟಗಿ ತಾಲೂಕು ಜಿಲ್ಲೆಯಲ್ಲಿ ಎರಡನೇ ಸ್ಥಾನ ಪಡೆದಿರುವುದನ್ನು ಶ್ಲಾಘಿಸಿದ ಸಚಿವರು, ಉತ್ತಮ ಸಾಧನೆ ಮಾಡಿದ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು. ಸಭೆಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.






