ಮೈಸೂರು : ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್.ಧ್ರುವ ನಾರಾಯಣ್ ದಿಢೀರ್ ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಸಂಘಟನೆಯ ಕಾರ್ಯಗಳಲ್ಲಿ ನಿರತರಾಗಿದ್ದ ಧ್ರುವ ನಾರಾಯಣ ಈ ಬಾರಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಇರಾದೆ ಹೊಂದಿದ್ದರು. ಇದಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಸಹ ಯಾರಿಂದ ತಕರಾರು ಇರಲಿಲ್ಲ.
ನಂಜನಗೂಡು ಕ್ಷೇತ್ರದಿಂದ ಕಣಕ್ಕಿಳಿದು ರಾಜ್ಯ ರಾಜಕೀಯಕ್ಕೆ ಮರಳುವ ಆಸೆ ಹೊಂದಿದ್ದ ಧ್ರುವ ನಾರಾಯಣ ಬಾರದ ಲೋಕಕ್ಕೆ ತೆರಳಿದ್ದಾರೆ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಕೂಡ ಮಾಡಿದ್ದ ಧ್ರುವ ನಾರಾಯಣ ನಂಜನಗೂಡು ಕ್ಷೇತ್ರದಿಂದ ಜಯಭೇರಿ ಬಾರಿಸೋಕೆ ಎಲ್ಲಾ ರೀತಿಯಿಂದಲೂ ಸಜ್ಜಾಗುತ್ತಿದ್ದರು . ಆದರೆ ಧ್ರುವ ನಾರಾಯಣ ನಿಧನದ ಬಳಿಕ ಇದೀಗ ನಂಜನಗೂಡು ಭಾಗದ ಕಾಂಗ್ರೆಸ್ ಕಾರ್ಯಕರ್ತರು ಅವರ ಪುತ್ರ ದರ್ಶನ್ಗೆ ಟಿಕೆಟ್ ನೀಡುವಂತೆ ಕಾಂಗ್ರೆಸ್ ಹಿರಿಯ ನಾಯಕರಿಗೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.
ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಬಯಸಿ ಈಗಾಗಲೇ ಧ್ರುವ ನಾರಾಯಣ ಕೆಪಿಸಿಸಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇತ್ತ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಡಾ. ಹೆಚ್.ಸಿ ಮಹದೇವಪ್ಪ ಕೂಡ ನಂಜನಗೂಡು ಕ್ಷೇತ್ರದಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹೀಗಾಗಿ ಕಾಂಗ್ರೆಸ್ ಇದೀಗ ನಂಜನಗೂಡು ಕ್ಷೇತ್ರದ ಟಿಕೆಟ್ನ್ನು ಧ್ರುವ ನಾರಾಯಣ ಕುಟುಂಬಕ್ಕೆ ನೀಡುತ್ತಾ ಅಥವಾ ಹೆಚ್.ಸಿ ಮಹದೇವಪ್ಪರಿಗೆ ನೀಡುತ್ತಾ ಅನ್ನೋದು ರಾಜಕೀಯ ವಲಯದಲ್ಲಿ ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಮಾರ್ಪಟ್ಟಿದೆ.