ಚಿತ್ರದುರ್ಗ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕೊನೆಯ ತಿಂಗಳು ಕರಾಳ ಡಿಸೆಂಬರ್ ಆಗಿದೆ. ಇಂದು ಬೆಳ್ಳಂಬೆಳಗ್ಗೆಯೇ ಚಿತ್ರದುರ್ಗದಲ್ಲಿ(Chitradurga) ಸಂಭವಿಸಿದ ಭೀಕರ ಅಪಘಾತಕ್ಕೆ ಸಂಪೂರ್ಣ ಕರ್ನಾಟಕವೇ ಬೆಚ್ಚಿ ಬಿದ್ದಿದೆ. ಚಿತ್ರದುರ್ಗದ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಬಸ್ ಪ್ರಯಾಣಿಕರು ಹಾಗೂ ಲಾರಿ ಚಾಲಕ ಹಾಗೂ ಕ್ಲೀನರ್ ಸಜೀವ ದಹನವಾಗಿದ್ದಾರೆ.

ಈ ಘಟನೆ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ(Narendra Modi) ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಗಾಯಾಳುಗಳಿಗೆ 50,000 ರೂಪಾಯಿ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು, ʼಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್)ಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದುʼ ಎಂದು ಕನ್ನಡದಲ್ಲೇ ಬರೆಯಲಾಗಿದೆ.











