ಗ್ರಾಮೀಣ ಪ್ರದೇಶಗಳಲ್ಲಿ ಹಿಂದೆ ಲಭ್ಯವಿದ್ದ ಜಲಮೂಲಗಳನ್ನು ಪತ್ತೆ ಮಾಡಿ ಅವುಗಳನ್ನು ಪುನರಜ್ಜೀವಗೊಳಿಸುವ ಮೂಲಕ ನೀರಿನ ಕೊರತೆಯನ್ನು ನೀಗಲು ಕಾರ್ಯಕ್ರಮ ಹಾಕಿಕೊಳ್ಳಬೇಕಾಗಿದೆಯಲ್ಲದೆ, ಆರ್.ಒ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿರಿಸಿಕೊಳ್ಳಲು ವಿಶೇಷ ಕಾರ್ಯಕ್ರಮ ರೂಪಿಸಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಸಚಿವರು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಿ.ರಣದೀಪ್ ಅವರೊಂದಿಗೆ ಗ್ರಾಮೀಣ ನೀರು ಸರಬರಾಜು ಇಲಾಖೆಗೆ ಸಂಬಂಧಿಸದಂತೆ ಸಮಾಲೋಚನೆ ನಡೆಸಿ ಇಲಾಖೆಯ ಕೆಲವು ಪ್ರಮುಖ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಕಾರ್ಯದರ್ಶಿಗಳು ಗ್ರಾಮೀಣ ನೀರು ಸರಬರಾಜು ಇಲಾಖೆಯ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಉತ್ತಮ ಗುಣಮಟ್ಟದ ನೀರು ಪೂರೈಕೆ, ನೀರು ಬಳಕೆ, ಸಂಶೋಧನೆ ಮುಂತಾದ ತಂತ್ರಜ್ಞಾನ ಆಧಾರಿತ ಸವಾಲುಗಳನ್ನು ಎದುರಿಸಲು ಯಲಹಂಕ ಬಳಿ ಉತ್ಕೃಷ್ಟತಾ ಕೇಂದ್ರವನ್ನು ಆರಂಭಿಸುವ ಯೋಜನೆಯಿದ್ದು, ಗ್ರಾಮೀಣ ಹಾಗೂ ನಗರ ನೀರು ಸರಬರಾಜು ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು, ಎಂಜನಿಯರುಗಳು ಹಾಗೂ ನೌಕರರಿಗೆ ಇಲ್ಲಿ ತಂತ್ರಜ್ಞಾನದ ಅರಿವು ಮೂಡಿಸುವದರೊಂದಿಗೆ ಖಾಸಗಿ ಸಹಭಾಗಿತ್ವದಲ್ಲಿ ನೀರಿಗೆ ಸಂಬಂಧಿಸಿದ ನವೋದ್ಯಮಗಳನ್ನು ಪ್ರೋತ್ಸಾಹಿಸುವ ಗುರಿಯಿದೆ, ಈ ಉತ್ಕೃಷ್ಟತಾ ಕೇಂದ್ರವನ್ನು ಸಜ್ಜುಗೊಳಿಸಲು ಕಾರ್ಯೋನ್ಮುಖರಾಗಬೇಕಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯದರ್ಶಿಗಳಿಗೆ ತಿಳಿಸಿದರು.