ಇನ್ನೇನು ಕೆಲವೇ ದಿನಗಳಲ್ಲಿ 2023ರ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಪಕ್ಷದ ನಾಯಕರು, ಮುಖಂಡರು ರಾಜ್ಯದ ಮೂಲೆ ಮೂಲೆಗಳಿಗೂ ತೆರಳಿ ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಇಂದು ಕರ್ನಾಟಕ ವಿಧಾನಸಭೆ ಚುನಾವಣಾ ಅಖಾಡಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರವೇಶ ಮಾಡಲಿದ್ದಾರೆ. ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕಿ ಇಂದು ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಮೊನ್ನೆಯಷ್ಟೇ ಪ್ರಿಯಾಂಕ ಗಾಂಧಿಯವರ ಸಹೋದರ ರಾಹುಲ್ ಗಾಂಧಿ ಉತ್ತರ ಕರ್ನಾಟಕ ಭಾಗದಲ್ಲಿ ಭರ್ಜರಿ ಮತಬೇಟೆ ನಡೆಸಿದ್ರು.

ಇದೀಗ ಮತ ಯಾಚನೆಗಾಗಿ ಪ್ರಿಯಾಂಕ ಗಾಂಧಿ ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ. ಇಂದು ಮಧ್ಯಾಹ್ನ ಮೈಸೂರಿನ ಟಿ.ನರಸೀಪುರ ಕ್ಷೇತ್ರದ ಯಳವರ ಹುಂಡಿಯಲ್ಲಿ ನಡೆಯಲಿರುವ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿರುವ ಪ್ರಿಯಾಂಕ ಗಾಂಧಿ ಬಳಿಕ ಮಧ್ಯಾಹ್ನ 3 ಗಂಟೆಗೆ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಗೌರಿಶಂಕರ ಹಾಲ್ನಲ್ಲಿ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಮೈಸೂರು ಜಿಲ್ಲೆಯ ಕೃಷ್ಣರಾಜನಗರ ಕ್ಷೇತ್ರದಲ್ಲಿ ಬೃಹತ್ ರ್ಯಾಲಿ ನಡೆಸಲಿದ್ದಾರೆ. ತೋಪಮ್ಮ ದೇವಾಲಯದಿಂದ ಅಂಬೇಡ್ಕರ್ ಪ್ರತಿಮೆ ಮೂಲಕ ಪುರಸಭೆ ಕಚೇರಿವರೆಗೆ ಬೃಹತ್ ರ್ಯಾಲಿ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಲಿದ್ದಾರೆ.