ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮೊದಲ ಬಾರಿಗೆ ಫೈನಲ್ ತಲುಪಿದ್ದ ಜಮ್ಮು ಮತ್ತು ಕಾಶ್ಮೀರ ತಂಡ ಬಲಿಷ್ಠ ಕರ್ನಾಟಕವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಜಮ್ಮು ಮತ್ತು ಕಾಶ್ಮೀರ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 584 ರನ್‌ಗಳನ್ನು ಕಲೆಹಾಕಿತು. ಪ್ರತಿಯಾಗಿ ಕರ್ನಾಟಕ ತಂಡ 293 ರನ್‌ಗಳಿಗೆ ಆಲೌಟ್ ಆಯಿತು. ಇದರಿಂದ ಜಮ್ಮು ಮತ್ತು ಕಾಶ್ಮೀರಕ್ಕೆ 291 ರನ್‌ಗಳ ಮುನ್ನಡೆ ಸಿಕ್ಕಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಕೂಡ ಜಮ್ಮು ಮತ್ತು ಕಾಶ್ಮೀರ ತಂಡ ಉತ್ತಮ ಪ್ರದರ್ಶನ ನೀಡಿ ಒಟ್ಟು ಮುನ್ನಡೆಯನ್ನು 630 ರನ್‌ಗಳಿಗೆ ಹೆಚ್ಚಿಸಿತು. ಪಂದ್ಯ ಡ್ರಾದಲ್ಲಿ ಅಂತ್ಯಗೊಂಡರೂ ಮೊದಲ ಇನ್ನಿಂಗ್ಸ್‌ನ ಮುನ್ನಡೆಯ ಆಧಾರದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡವನ್ನು ಚಾಂಪಿಯನ್ ಎಂದು ಘೋಷಿಸಲಾಯಿತು.

ಚಾಂಪಿಯನ್ ತಂಡಕ್ಕೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ 2 ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಬಿಸಿಸಿಐನಿಂದ ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ 5 ಕೋಟಿ ರೂಪಾಯಿ ಹಾಗೂ ರನ್ನರ್ ಅಪ್ ಕರ್ನಾಟಕ ತಂಡಕ್ಕೆ 3 ಕೋಟಿ ರೂಪಾಯಿ ಬಹುಮಾನ ದೊರೆಯಲಿದೆ. ಈ ಜಯ ಜಮ್ಮು ಮತ್ತು ಕಾಶ್ಮೀರ ತಂಡದ ಕಠಿಣ ಪರಿಶ್ರಮಕ್ಕೆ ಸಿಕ್ಕ ದೊಡ್ಡ ಗೌರವವಾಗಿದೆ. ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ ಇದು ಐತಿಹಾಸಿಕ ಗೆಲುವಾಗಿದೆ. ಬರೋಬ್ಬರಿ 67 ವರ್ಷಗಳ ನಂತರ ತಂಡವು ತನ್ನ ಮೊದಲ ರಣಜಿ ಟ್ರೋಫಿಯನ್ನು ಗೆದ್ದು ಬೀಗಿದೆ.







