ಬೆಂಗಳೂರು: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ನೀರು ಹರಿಸುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಸಮಾಲೋಚಿಸಿ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಮಧು ಬಂಗಾರಪ್ಪ ತಿಳಿಸಿದ್ದಾರೆ.ಬೆಂಗಳೂರಿನ ವಿಕಾಸಸೌಧದಲ್ಲಿ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ 89ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭದ್ರಾ ಜಲಾಶಯದ ನೀರಿನ ಮಟ್ಟ, ಅಚ್ಚುಕಟ್ಟು ಪ್ರದೇಶದಲ್ಲಿನ ಬೆಳೆಗಳ ಸ್ಥಿತಿಗತಿ ಹಾಗೂ ರೈತರು, ಶಾಸಕರು ಮತ್ತು ಸಚಿವರ ಅಭಿಪ್ರಾಯಗಳ ಕುರಿತು ಚರ್ಚೆ ನಡೆಯಿತು.

ಸಭೆಯ ಬಳಿಕ ಮಾತನಾಡಿದ ಮಧು ಬಂಗಾರಪ್ಪ, ಪ್ರಸ್ತುತ ಪರಿಸ್ಥಿತಿಯಲ್ಲಿ ತಕ್ಷಣವೇ ನೀರು ಹರಿಸುವ ಕುರಿತು ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಸಭೆಯಲ್ಲಿ ವ್ಯಕ್ತವಾದ ಎಲ್ಲ ಅಭಿಪ್ರಾಯಗಳು ಹಾಗೂ ಜಲಾಶಯದ ನೀರಿನ ಲಭ್ಯತೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ. ಸಂಬಂಧಿಸಿದ ಜಿಲ್ಲಾಧಿಕಾರಿಗಳಿಂದ ಅಗತ್ಯ ಅಂಕಿ-ಅಂಶಗಳನ್ನು ಪಡೆದು, ಅದರ ಆಧಾರದ ಮೇಲೆ ನೀರು ಹರಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ರೈತರ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ನೀರಾವರಿ ಸಲಹಾ ಸಮಿತಿ ಸಭೆಯನ್ನು ತುರ್ತಾಗಿ ಕರೆಯಲಾಗಿದೆ. ಸಭೆಯಲ್ಲಿ ಸಚಿವರು, ಶಾಸಕರು ಹಾಗೂ ರೈತ ಮುಖಂಡರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದು, ಅವುಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.ಮುಂಗಾರು ಮಳೆ ಸಮರ್ಪಕವಾಗಿ ಬಾರದ ಹಿನ್ನೆಲೆಯಲ್ಲಿ ಮಳೆ ನಂಬಿ ಬಿತ್ತನೆ ಮಾಡದಂತೆ ಮುಖ್ಯಮಂತ್ರಿ ಈಗಾಗಲೇ ರೈತರಿಗೆ ಮನವಿ ಮಾಡಿದ್ದರು. ಆದರೂ ಕೆಲವು ಭಾಗಗಳಲ್ಲಿ ರೈತರು ಬಿತ್ತನೆ ಮಾಡಿದ್ದಾರೆ. ಇದರಿಂದ ಸರ್ಕಾರದ ಮುಂದೆ ಸವಾಲಿನ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ಭರ್ತಿಯಾಗಿವೆ. ಆದರೆ ದಕ್ಷಿಣ ಕರ್ನಾಟಕದಲ್ಲಿ ಈ ಬಾರಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಂದಿಲ್ಲ. ಹೀಗಾಗಿ ಎಲ್ಲ ಅಂಶಗಳನ್ನು ಪರಿಗಣಿಸಿ ಸರ್ಕಾರ ಜವಾಬ್ದಾರಿಯುತವಾಗಿ ನಿರ್ಧಾರ ಕೈಗೊಳ್ಳಲಿದೆ ಎಂದು ಸಚಿವರು ಭರವಸೆ ನೀಡಿದರು.ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ, ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್, ಶಾಸಕರು, ರೈತ ಮುಖಂಡರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.






