ಬೆಂಗಳೂರು: ಮೇ.31: ರಾಜ್ಯಕ್ಕೆ ಮುಂಗಾರು ಪ್ರವೇಶಕ್ಕೂ ಮುನ್ನವೇ ರಾಜ್ಯಾದ್ಯಂತ ಮಳೆ ಅಬ್ಬರ ಶುರುವಾಗಿದೆ. ಹಲವೆಡೆ ಬಿರು ಗಾಳಿ-ಮಳೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ. ಸಿಡಿಲಿನಿಂದಾಗಿ ಜೀವಹಾನಿಯೂ ಸಂಭವಿಸಿದೆ. ಮಳೆಗಾಲದಲ್ಲಿ ಆಗುವ ತೊಂದರೆಗಳ ನಿವಾರಿಸಲು ಕಂದಾಯ ಸಚಿವ ಕೃಷ್ಣಬೈರೇಗೌಡ ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಸಚಿವ ಕೃಷ್ಣಬೈರೇಗೌಡ, ಕಂದಾಯ ಇಲಾಖೆ ಅಧಿಕಾರಿಗಳ ಪರಿಶೀಲನಾ ಸಭೆ ನಡೆಸಿದ್ರು. ಬಳಿಕ ಅಧಿಕಾರಿಗಳಿಗೆ ನೀಡಿರುವ ಸೂಚನೆಗಳ ಕುರಿತ ವಿವರಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಕೆಲವು ಭಾಗಗಳಲ್ಲಿ ಹೆಚ್ಚಿನ ಹಾನಿಯಾಗಿರುವುದರಿಂದ ಪರಿಹಾರ ಕ್ರಮದ ಬಗ್ಗೆ ಹಿರಿಯ ಅಧಿಕಾರಿಗಳು, ಎಸ್ಡಿಆರ್ಎಫ್, ಎನ್ಡಿಆರ್ಎಫ್ ಹಾಗೂ ಹವಾಮಾನ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಕೆಲವು ತೀರ್ಮಾನ ತೆಗೆದುಕೊಂಡು ಸೂಚನೆ ನೀಡಿದ್ದೇನೆ ಎಂದರು.