ರಾಜಧಾನಿಯಲ್ಲಿ ಈ ಹಿಂದೆ ಸುಮಾರು 400 ಕೆರೆಗಳು ಇದ್ದವು. ಆದರೆ, ಒತ್ತುವರಿಯಿಂದ ಅನೇಕ ಕೆರೆಗಳು ಕಣ್ಮರೆಯಾಗಿವೆ. ಅವುಗಳನ್ನು ತೆರವು ಮಾಡಲು ಸೂಚನೆ ಕೊಟ್ಟಿದ್ದೇವೆ. ರಾಜಕಾಲುವೆ ತೆರವುಗೊಳಿಸುವಲ್ಲಿ ಯಾವುದೇ ರಾಜಿ ಇಲ್ಲ. ಯಾವ ಪ್ರಬಲ ರಾಜಕಾರಣಿಯೇ ಇರಲಿ, ಬೇರೆ ಯಾರೇ ಇರಲಿ ಮುಲಾಜಿಲ್ಲದೆ ತೆರವುಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದರು.
![](https://pratidhvani.com/wp-content/uploads/2024/05/WhatsApp-Image-2024-05-22-at-5.03.21-PM-1-1024x711.jpeg)
ನಗರದ ವಿವಿಧೆಡೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾದ ಪ್ರದೇಶಗಳನ್ನು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ರಾಮಲಿಂಗಾರೆಡ್ಡಿ ಬಿಡಿಎ ಅಧ್ಯಕ್ಷರು, ಆಯುಕ್ತರು ಸೇರಿ ಅಧಿಕಾರಿಗಳ ತಂಡದ ಜೊತೆ ಅನೇಕ ಪ್ರದೇಶಗಳಿಗೆ ಭೇಟಿ ನೀಡಿದೆವು. ಜೂನ್ ತಿಂಗಳಿನಿಂದ ಮುಂಗಾರು ಪ್ರಾರಂಭವಾಗಲಿದೆ. ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿ ಪ್ರವಾಹ ಉಂಟಾಗಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದೇವೆ ಎಂದು ಹೇಳಿದರು.
ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5500 ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮುಚ್ಚಬೇಕು, ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ 557 ಗುಂಡಿಗಳಿವೆ. ಈ ತಿಂಗಳಲ್ಲಿ ಭರ್ತಿ ಮಾಡಬೇಕು ಎಂದು ಸೂಚಿಸಲಾಗಿದೆ. ಸಿಲ್ಕ್ ಬೋರ್ಡ್ ಬಳಿ ಮೆಟ್ರೋ ನಿರ್ಮಿಸಿರುವ ರಸ್ತೆಯನ್ನು ಅಗಲೀಕರಿಸಲು ಸೂಚನೆ ನೀಡಲಾಗಿದೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಡಿವಾಳ ಕೆರೆಯ ಬಳಿ ಇನ್ನೊಂದು ಚರಂಡಿ ನಿರ್ಮಿಸಲು ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದರು.