ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಆಯ್ಕೆಯಲ್ಲಿ ಬಿಗ್ ಟ್ವಿಸ್ಟ್, ಮುಂದಿನ cm ಆಯ್ಕೆ ಇನ್ನೂ ಅಂತಿಮವಾಗಿಲ್ಲ, ಯಾರೂ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದ ಸುರ್ಜೇವಾಲ ಹೇಳಿದ್ದಾರೆ. ಇದರೊಂದಿಗೆ CM ಹುದ್ದೆಗೆ ಪೈಪೋಟಿ ಮುಂದುವರಿದಂತಾಗಿದೆ. ಹೈಕಮಾಂಡ್ ಜತೆ ಹಲವು ಸುತ್ತಿನ ಸಭೆಗಳ ನಂತರ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಸುರ್ಜೇವಾಲ, ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂಬ ವದಂತಿಗಳು ಹರಡಿದ್ದು, ರಾಜ್ಯದ ಹಲವೆಡೆ ಸಿದ್ದರಾಮಯ್ಯ ಬೆಂಬಲಿಗರು ಸಂಭ್ರಮವನ್ನೂ ವ್ಯಕ್ತಪಡಿಸಿದ್ದರು. ಹಲವೆಡೆ ಸಂಭ್ರಮಾಚರಣೆ ಆರಂಭವಾಗಿತ್ತು. ಇದರ ಬೆನ್ನಲ್ಲೇ ಸುರ್ಜೇವಾಲ ಅವರು ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, 135 ಸ್ಥಾನ ಗಳಿಸುವ ಮೂಲಕ ಕಾಂಗ್ರೆಸ್ ಭರ್ಜರಿ ಬಹುತಮ ಗಳಿಸಿತ್ತು. ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿತ್ತು. ಅದರಲ್ಲಿ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯವಾಗದ ಕಾರಣ ವೀಕ್ಷಕರು ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ಗೆ ಮಾಹಿತಿ ರವಾನಿಸಿದ್ದರು. ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಾದ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಾತುಕತೆ ನಡೆಸಿದ್ದರು. ಆದರೆ ಹಲವು ಸುತ್ತಿನ ಮಾತುಕತೆಗಳ ನಂತರವೂ ಒಮ್ಮತಕ್ಕೆ ಬರುವುದು ಸಾಧ್ಯವಾಗಲಿಲ್ಲ.


