ಬೆಂಗಳೂರು: ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ನಡೆಯುತ್ತಿದ್ದ ರೇಷನ್ ಕಾರ್ಡ್ ಇ-ಕೆವೈಸಿ ಪ್ರಕ್ರಿಯೆಯನ್ನು ಆಹಾರ ಇಲಾಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಇತ್ತೀಚೆಗೆ ಇ-ಕೆವೈಸಿ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಆಗಮಿಸಿದ್ದರಿಂದ ಸರ್ವರ್ ಸಮಸ್ಯೆ ಉಂಟಾಗಿತ್ತು. ಇದೇ ವೇಳೆ ಎರಡು ತಿಂಗಳ ಅಕ್ಕಿ ವಿತರಣೆಗೆ ಬಯೋಮೆಟ್ರಿಕ್ ಪ್ರಕ್ರಿಯೆಯೂ ನಡೆಯುತ್ತಿದ್ದ ಕಾರಣ ಹಲವು ಕಡೆ ಜನರು ದೀರ್ಘಕಾಲ ಸಾಲಿನಲ್ಲಿ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಈ ಹಿನ್ನೆಲೆಯಲ್ಲಿ ಮೊದಲು ರೇಷನ್ ವಿತರಣೆಗೆ ಆದ್ಯತೆ ನೀಡಲು ಇಲಾಖೆ ನಿರ್ಧರಿಸಿದೆ. ಹೀಗಾಗಿ ಸೆಪ್ಟೆಂಬರ್ 1ರ ಬಳಿಕ ಇ-ಕೆವೈಸಿ ಪ್ರಕ್ರಿಯೆ ಮತ್ತೆ ಆರಂಭವಾಗಲಿದ್ದು, ಸೆಪ್ಟೆಂಬರ್ ಅಂತ್ಯದೊಳಗೆ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅರ್ಹ ಫಲಾನುಭವಿಗಳನ್ನು ಗುರುತಿಸಲು ಐದು ವರ್ಷಕ್ಕೊಮ್ಮೆ ಇ-ಕೆವೈಸಿ ಪ್ರಕ್ರಿಯೆ ನಡೆಸಲಾಗುತ್ತಿದೆ.







