ಮೈಸೂರು : ರಾಜ್ಯದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುವುದು ಹಾಗೂ ಶೈಕ್ಷಣಿಕ ವಾತಾವರಣವನ್ನು ಸುಧಾರಿಸುವ ಉದ್ದೇಶದಿಂದ ಪ್ರಸಕ್ತ ವರ್ಷಾಂತ್ಯದೊಳಗೆ ಒಟ್ಟು 16,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ ಎದುರಾಗಿರುವ ಶಿಕ್ಷಕರ ಕೊರತೆಯನ್ನು ನೀಗಿಸುವುದು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ. ಹಿಂದಿನ ಸರ್ಕಾರಗಳ ಆಡಳಿತಾವಧಿಯಲ್ಲಿ ಶಿಕ್ಷಕರ ಕೊರತೆ ಹೆಚ್ಚಾಗಿತ್ತು. ಆದರೆ ತಮ್ಮ ಅಧಿಕಾರಾವಧಿ ಆರಂಭವಾದಾಗಿನಿಂದ ಈ ಕೊರತೆಯನ್ನು ಹಂತ ಹಂತವಾಗಿ ಸರಿಪಡಿಸುವ ಕೆಲಸ ನಡೆಯುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ 16 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಚುರುಕಾಗಿ ಸಾಗುತ್ತಿದೆ. ಈ ವರ್ಷ ಮುಗಿಯುವುದರೊಳಗೆ ಸಂಪೂರ್ಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಶಾಲೆಗಳಿಗೆ ಶಿಕ್ಷಕರನ್ನು ನಿಯೋಜಿಸಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.






