ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿ ಎಫ್ ಸರ್ಕಾರಕ್ಕೆ ಲೋಕಾಯುಕ್ತ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ. ಕಣ್ಣೂರು ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಗೋಪಿನಾಥ್ ರವೀಂದ್ರನ್ ನೇಮಕ ವಿಚಾರವಾಗಿ ಉನ್ನತ ಶಿಕ್ಷಣ ಸಚಿವೆ ಆರ್.ಬಿಂದು ವಿರುದ್ಧ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಸ್ವಜನಪಕ್ಷಪಾತ, ಅಧಿಕಾರ ದುರುಪಯೋಗ ಮತ್ತು ವಿಸಿ ಮರುನೇಮಕದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಮಾಜಿ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಚೆನ್ನಿತ್ತಲ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ಕುರಿತು ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್ ಅವರು ವಿಸಿ ಗೋಪಿನಾಥ್ ಮರುನೇಮಕಕ್ಕೆ ಸಚಿವರು ಅವರ ಹೆಸರನ್ನು ಮಾತ್ರ ಸೂಚಿಸಿದ್ದಾರೆ. ಅಂತಹ ಸಲಹೆ ಅಧಿಕಾರ ದುರುಪಯೋಗ ಮತ್ತು ಸ್ವಜನಪಕ್ಷಪಾತ ಎಂದೆನಿಸುವುದಿಲ್ಲ. ಮೇಲಾಗಿ ಉಪಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರೊಬ್ಬರಿಗೆ ಅಧಿಕಾರವಿರುತ್ತದೆ. ವಿಸಿ ಪರವಾಗಿ ಸಚಿವರು ಪ್ರಸ್ತಾವನೆಯನ್ನು ಸಲ್ಲಿಸಿದರೆ ಅದರಲ್ಲಿ ಅಕ್ರಮದ ಪ್ರಶ್ನೆ ಎಲ್ಲಿಂದ ಬರುತ್ತದೆ ಎಂದು ಹೇಳಿ ನ್ಯಾಯಮೂರ್ತಿಗಳು ಅರ್ಜಿಯನ್ನು ತಿರಸ್ಕರಿಸಿದ್ದಾರೆ.










