ಮಂಗಳೂರು: ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿರುವ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ನೇರವಾಗಿ ಆದೇಶಿಸಿಲ್ಲ. ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳನ್ನು ರಕ್ಷಿಸುವ ಕಾನೂನಿನಡಿ ನಿಗದಿಪಡಿಸಿರುವ ಪ್ರಕ್ರಿಯೆಯನ್ನು ಪಾಲಿಸದೆ ಯಾವುದೇ ವ್ಯಾಪಾರಿಯನ್ನು ತೆರವುಗೊಳಿಸಬಾರದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘದ ಕಾರ್ಯಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಹಾಗೂ ಇತರರ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಸಂಘದ ಪರವಾಗಿ ಹಿರಿಯ ವಕೀಲ ಎಸ್. ಬಾಲನ್ ವಾದ ಮಂಡಿಸಿದರು.ಮಂಗಳೂರು ಟೌನ್‌ಹಾಲ್ ಸಮೀಪದ ಪಾದಚಾರಿ ಮಾರ್ಗದ ಬಳಿ ಸಂಡೇ ಬಜಾರ್‌ನಲ್ಲಿ ವ್ಯಾಪಾರ ನಡೆಸುತ್ತಿದ್ದ ಬೀದಿ ಬದಿ ವ್ಯಾಪಾರಿಗಳನ್ನು ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ತೆರವುಗೊಳಿಸಲು ಪಾಲಿಕೆ ಅಧಿಕಾರಿಗಳು ಮುಂದಾಗಿದ್ದರು. ಈ ವೇಳೆ ಕಾರ್ಯಾಚರಣೆಯನ್ನು ಪ್ರಶ್ನಿಸಿ ಇಮ್ತಿಯಾಜ್ ಸೇರಿದಂತೆ ಸಂಘದ ಪದಾಧಿಕಾರಿಗಳು ಸ್ಥಳಕ್ಕೆ ತೆರಳಿ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಬಳಿಕ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಅರ್ಜಿಯ ವಿಚಾರಣೆಯಲ್ಲಿ ಎಸ್. ಬಾಲನ್ ಅವರು, ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಮೊದಲು Street Vendors (Protection of Livelihood and Regulation of Street Vending) Act, 2014 ಅಡಿಯಲ್ಲಿ ನಿಗದಿಪಡಿಸಿರುವ ಕಾನೂನುಬದ್ಧ ಪ್ರಕ್ರಿಯೆಯನ್ನು ಪಾಲಿಸಬೇಕು ಎಂದು ವಾದಿಸಿದರು.ಸಂಡೇ ಬಜಾರ್‌ನ ತಾತ್ಕಾಲಿಕ ಅಂಗಡಿಗಳನ್ನು ಯಾವುದೇ ನೋಟಿಸ್ ನೀಡದೆ ಹಾಗೂ ವಿಚಾರಣೆಗೆ ಅವಕಾಶ ನೀಡದೆ ತೆರವುಗೊಳಿಸಿರುವುದು ನೈಸರ್ಗಿಕ ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದರು.
ಅಧಿಕಾರಿಗಳು ಸುಪ್ರೀಂ ಕೋರ್ಟ್‌ನ Maniyar Iliyaz v. P. Ayyappan & Others ಪ್ರಕರಣದ ತೀರ್ಪನ್ನು ಆಧಾರವಾಗಿಸಿಕೊಂಡಿದ್ದಾರೆ. ಆದರೆ ಆ ತೀರ್ಪು ಪಾದಚಾರಿಗಳ ಹಕ್ಕು ಹಾಗೂ ಸೂಕ್ತ ಪಾದಚಾರಿ ಮೂಲಸೌಕರ್ಯ ಒದಗಿಸುವುದಕ್ಕೆ ಸಂಬಂಧಿಸಿದ್ದು, ಬೀದಿ ವ್ಯಾಪಾರಿಗಳು ಅಥವಾ ವಾರದ ಮಾರುಕಟ್ಟೆಗಳನ್ನು ತೆರವುಗೊಳಿಸುವಂತೆ ನಿರ್ದೇಶಿಸಿಲ್ಲ ಎಂದು ಬಾಲನ್ ವಾದಿಸಿದರು.

ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಸುಪ್ರೀಂ ಕೋರ್ಟ್‌ನ ಆದೇಶವು ರಸ್ತೆ ನಿರ್ಮಾಣದ ಸಂದರ್ಭದಲ್ಲಿ ಸೂಕ್ತ ಫುಟ್‌ಪಾತ್ ವ್ಯವಸ್ಥೆ ಕಲ್ಪಿಸುವುದಕ್ಕೆ ಸಂಬಂಧಿಸಿದೆ. ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳನ್ನು ರಕ್ಷಿಸುವ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಬೀದಿ ವ್ಯಾಪಾರಿಗಳ ತೆರವು ಅಗತ್ಯವಿದ್ದರೆ ಕಾನೂನಿನಲ್ಲಿ ನಿಗದಿಪಡಿಸಿರುವ ಪ್ರಕ್ರಿಯೆಯನ್ನು ಪಾಲಿಸಬೇಕು ಹಾಗೂ ಪುನರ್ವಸತಿ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ಇಮ್ತಿಯಾಜ್ ಹಾಗೂ ಇತರರು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಗಳಿಗೂ ಅರ್ಜಿದಾರರ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಘಟನೆಗೆ ಸಂಬಂಧಿಸಿದ ವಿಡಿಯೋದಲ್ಲಿ ಇಮ್ತಿಯಾಜ್ ಅವರು ಕಾನೂನುಬದ್ಧ ಪ್ರಕ್ರಿಯೆ ಪಾಲಿಸದೆ ತೆರವು ಕಾರ್ಯಾಚರಣೆ ನಡೆಸಬಾರದು ಎಂದು ಅಧಿಕಾರಿಗಳಿಗೆ ಮನವಿ ಮಾಡಿರುವುದು ಕಂಡುಬರುತ್ತದೆ ಎಂದು ವಾದಿಸಿದರು.
ದೂರಿನಲ್ಲಿ ಹಲ್ಲೆಗೊಳಗಾದ ವ್ಯಕ್ತಿಯ ಗುರುತು, ಹಲ್ಲೆಯ ಸ್ವರೂಪ ಅಥವಾ ಗಾಯಗಳ ಕುರಿತು ಸ್ಪಷ್ಟ ವಿವರಗಳಿಲ್ಲ. ಹೀಗಾಗಿ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅನ್ವಯಿಕತೆಯ ಬಗ್ಗೆಯೂ ಪ್ರಶ್ನೆ ಎತ್ತಲಾಯಿತು.ಅಲ್ಲದೆ, ಎಫ್‌ಐಆರ್ ದಾಖಲಿಸಿದ ಬಳಿಕ ಇದೇ ಬೀದಿ ವ್ಯಾಪಾರಿಗಳ ಸಂಘವನ್ನು ಪಾಲಿಕೆ ಸಭೆಗೆ ಆಹ್ವಾನಿಸಿ ಅವರ ಸಮಸ್ಯೆಗಳ ಕುರಿತು ಚರ್ಚಿಸಲು ಮುಂದಾಗಿರುವುದು ಗಮನಾರ್ಹವಾಗಿದೆ. ಹೀಗಿರುವಾಗ, ವ್ಯಾಪಾರಿಗಳ ಪರವಾಗಿ ಕಾನೂನುಬದ್ಧ ಪ್ರಕ್ರಿಯೆ ಪಾಲಿಸುವಂತೆ ಮನವಿ ಮಾಡಿದ ಸಂಘದ ಪದಾಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿರುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.
ಹೈಕೋರ್ಟ್‌ನ ಈ ಅಭಿಪ್ರಾಯದಿಂದ ರಾಜ್ಯದಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕಾನೂನುಬದ್ಧ ಪ್ರಕ್ರಿಯೆ ಮತ್ತು ಅವರ ಹಕ್ಕುಗಳ ರಕ್ಷಣೆಯ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.






