ಬೆಂಗಳೂರು,
ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಹಿತದೃಷ್ಟಿಯಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪ ಅವರು ರಾಜ್ಯದ ಡಿಜಿಪಿಗೆ ಪತ್ರ ಬರೆದಿದ್ದಾರೆ.

ಪೊಲೀಸ್ ಇಲಾಖೆ ತುರ್ತು ಸೇವೆಯಾದ್ದರಿಂದ 24 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಹೆಚ್ಚುತ್ತಿರುವ ಉಷ್ಣಾಂಶ, ವಾಹನಗಳಿಂದ ಹೊರಹೊಮ್ಮುವ ಮಾಲಿನ್ಯ ಹಾಗೂ ನಗರಗಳಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಂದ ಉಂಟಾಗುತ್ತಿರುವ ಧೂಳು ಸಮಸ್ಯೆ ಸಂಚಾರ ಪೊಲೀಸರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವಿಶೇಷವಾಗಿ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ರಸ್ತೆ ಕಾಮಗಾರಿ, ಪೈಪ್‌ಲೈನ್ ಅಳವಡಿಕೆ ಮುಂತಾದ ಕಾರಣಗಳಿಂದ ವಾತಾವರಣ ಧೂಳಿನಿಂದ ಕೂಡಿದ್ದು, ಉಸಿರಾಟದ ತೊಂದರೆ, ಡಸ್ಟ್ ಅಲರ್ಜಿ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲೂ ಸಂಚಾರ ಪೊಲೀಸರು ಹಗಲು-ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದು, ಬಿಸಿಲಿನ ತಾಪದಿಂದಾಗಿ ಅವರು ತೊಂದರೆ ಅನುಭವಿಸುತ್ತಿದ್ದಾರೆ.

ಸಿಗ್ನಲ್‌ಗಳು ಹಾಗೂ ಪ್ರಮುಖ ಸ್ಥಳಗಳಲ್ಲಿ ನೆರಳಿನ ವ್ಯವಸ್ಥೆ ಇಲ್ಲದ ಕಾರಣ ಸಿಬ್ಬಂದಿಗಳು ಕಟ್ಟಡಗಳ ಗೋಡೆ, ಮರಗಳ ನೆರಳಲ್ಲಿ ನಿಂತು ಕೆಲಸ ನಿರ್ವಹಿಸುವ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅವರ ಆರೋಗ್ಯ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ.

ಹೀಗಾಗಿ ಸಂಚಾರ ಪೊಲೀಸರಿಗೆ ಪ್ಯಾರಾಚೂಟ್ ಕೊಡೆಗಳ ವ್ಯವಸ್ಥೆ, ಉತ್ತಮ ಗುಣಮಟ್ಟದ ಮಾಸ್ಕ್‌ಗಳ ಪೂರೈಕೆ, ಹಾಗೂ ನಿರ್ಜಲೀಕರಣ ತಡೆಯಲು ಕುಡಿಯುವ ನೀರು ಮತ್ತು ಎಲೆಕ್ಟ್ರೋಲೈಟ್ ಪಾನೀಯಗಳನ್ನು ಒದಗಿಸುವಂತೆ ಮನವಿ ಮಾಡಲಾಗಿದೆ. ಬೇಸಿಗೆ ಅವಧಿ ಮುಗಿಯುವವರೆಗೆ ಈ ಸೌಲಭ್ಯಗಳನ್ನು ಕಲ್ಪಿಸಲು ಸಂಬಂಧಿತ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.







