ಬೆಂಗಳೂರು : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಸ್ಥಾನಕ್ಕೆ ಕರ್ನಾಟಕದ ಸಂಸದ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ನೇಮಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನಮಂತ್ರಿ ನರೇಂದ್ರ ಮೋದಿ ಸಲಹೆಯ ಮೇರೆಗೆ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಇಂದು ಸ್ವೀಕರಿಸಿದ್ದಾರೆ.

ಇದಾದ ಬಳಿಕ ನಡೆದ ಬೆಳವಣಿಗೆಯಲ್ಲಿ ಪ್ರಲ್ಹಾದ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ ಎಂದು ಕೇಂದ್ರ ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ. ಪ್ರಲ್ಹಾದ ಜೋಶಿ ಅವರು ಈಗಾಗಲೇ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಣ ಇಂಧನ ಖಾತೆಗಳನ್ನು ನೋಡಿಕೊಳ್ಳುತ್ತಿದ್ದಾರೆ. ಈಗ ಶಿಕ್ಷಣ ಖಾತೆಯನ್ನು ಹೆಚ್ಚುವರಿಯಾಗಿ ನಿರ್ವಹಿಸಲಿದ್ದಾರೆ.
ಈ ಬದಲಾವಣೆಯು ನೀಟ್ (NEET-UG) ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವು ದೇಶಾದ್ಯಂತ ಸದ್ದು ಮಾಡಿ ವಿದ್ಯಾರ್ಥಿಗಳ ಪ್ರತಿಭಟನೆಗಳು ನಡೆದ ಬಳಿಕ ಆಗಿದೆ ಎನ್ನುವುದು ಗಮನಾರ್ಹ. ಧರ್ಮೇಂದ್ರ ಪ್ರಧಾನ್ ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪಗಳು ಹಾಗೂ ನೀಟ್ ಹಗರಣದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಇನ್ನೂ ಹೆಚ್ಚುವರಿ ಜವಾಬ್ದಾರಿ ಹೊತ್ತಿರುವ ಪ್ರಲ್ಹಾದ ಜೋಶಿ ಅವರು ರಾಜ್ಯದ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದು, ಬಿಜೆಪಿಯ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದಾರೆ.
ಒಟ್ಟು 5 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಜೋಶಿ ಗ್ರೀನ್ ಹೈಡೋಜನ್ ಕ್ಷೇತ್ರದಲ್ಲಿ ಸಾಧನೆ ಹಾಗೂ ಸಂಸತ್ತಿನಲ್ಲೂ ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಳ್ಳುವಲ್ಲಿ ಮೊದಲಿಗರಾಗಿದ್ದಾರೆ. ಆರ್‌ಎಸ್‌ಎಸ್ ಹಿನ್ನೆಲೆಯಿಂದ ಬಂದಿರುವ ಇವರು ನವೀಕರಣ ಇಂಧನ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ಹೀಗಾಗಿ ಈ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಜೋಶಿ ಅವರಿಗೆ ನೀಡಿದೆ ಎನ್ನಲಾಗಿದೆ.






