1983ರ ವಿಶ್ವಕಪ್ ವಿಜೇತ ಭಾರತ ತಂಡದ ಮಾಜಿ ಆಲ್ ರೌಂಡರ್ ಹಾಗೂ ಕರ್ನಾಟಕ ಮೂಲದ ರೋಜರ್ ಬಿನ್ನಿ ಮುಂದಿನ ಬಿಸಿಸಿಐ ಅಧ್ಯಕ್ಷ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ.
ಬಿಸಿಸಿಐ ಅಧ್ಯಕ್ಷರಾಗಿರುವ ಸೌರವ್ ಗಂಗೂಲಿ ಅವಧಿ ಮುಗಿದ ನಂತರ ಅವರ ಸ್ಥಾನಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ರೋಜರ್ ಬಿನ್ನಿ ದೇಶದ ಅತ್ಯುನ್ನತ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಗಾದಿ ಹಿಡಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
2019ರಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ರೋಜರ್ ಬಿನ್ನಿ, ಅಕ್ಟೋಬರ್ 18ರಂದು ನಡೆಯಲಿರುವ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ. ಅಕ್ಟೋಬರ್ 11 ಮತ್ತು 12ರಂದು ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗದಿಯಾಗಲಿದೆ.
ಬಿಸಿಸಿಐ ಕಾರ್ಯದರ್ಶಿ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಜೈ ಶಾ ಅದೇ ಸ್ಥಾನದಲ್ಲಿ ಮುಂದುವರಿಯುವ ಸಾಧ್ಯತೆ ಇದ್ದು, ಐಸಿಸಿಯಲ್ಲಿ ಭಾರತವನ್ನು ಪ್ರತಿನಿಧಿಸುವ ಆಕಾಂಕ್ಷೆ ಹೊಂದಿದ್ದಾರೆ.