ಬೆಂಗಳೂರು:ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಬಣ್ಣಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ.ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ.ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ಬಗ್ಗೆ ಸ್ಪಷ್ಟನೆ ನೀಡಲು ಸಾಧ್ಯವಾಗಿಲ್ಲ. ಸದನದಲ್ಲಿ ನಿಲುವಳಿ ಸೂಚನೆಗೆ ಅವಕಾಶ ಕೊಟ್ಟು ಜನರಲ್ಲಿರುವ ಗೊಂದಲ ನಿವಾರಣೆ ಮಾಡಬೇಕಿತ್ತು. ಅದನ್ನು ಬಿಟ್ಟು ಪಲಾಯನ ಮಾಡಿದ್ದರಿಂದ ಇದರಲ್ಲಿ ಏನೋ ಇದೆ ಎಂಬ ಅನುಮಾನ ಎಲ್ಲರಿಗೂ ಸ್ಪಷ್ಟವಾಯಿತು.ಪ್ರತಿ ಹಂತದಲ್ಲೂ ಸಿದ್ದರಾಮಯ್ಯನವರ ಹಸ್ತಕ್ಷೇಪ ಕಂಡುಬಂದಿದೆ. ಡಿ ನೋಟಿಫಿಕೇಶನ್,ಭೂ ಪರಿವರ್ತನೆ ಈ ಎಲ್ಲ ಹಂತದಲ್ಲೂ ಅವರ ಹುದ್ದೆಯ ಪ್ರಭಾವ ಬಳಕೆಯಾಗಿದೆ. ಇಷ್ಟೆಲ್ಲ ಆಗಿರುವಾಗ ಇದು ದೊಡ್ಡ ಹಗರಣ ಎಂಬುದು ಸಾಬೀತಾಗಿದೆ ಎಂದರು.
ಕಾಂಗ್ರೆಸ್ ಈಗ ದ್ವೇಷದ ರಾಜಕಾರಣ ಮಾಡಿದರೆ ಅರ್ಥವಿಲ್ಲ. ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು, ಸಿಬಿಐ ತನಿಖೆಯಾಗಬೇಕು ಹಾಗೂ ಎಲ್ಲ ನಿವೇಶನಗಳನ್ನು ವಾಪಸ್ ಪಡೆಯಬೇಕೆಂಬುದು ನಮ್ಮ ಬೇಡಿಕೆ. ನಿವೇಶನ ವಂಚಿತರಾದ ಜನರಿಗೆ ನ್ಯಾಯ ಸಿಗಬೇಕೆಂದು ನಮ್ಮ ಆಗ್ರಹ ಎಂದು ತಿಳಿಸಿದರು.