ಪಾಟ್ನಾ: ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿರುವ ಅಶೋಕ ಧಾಮ ಶಿವ ದೇವಾಲಯದಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ದುರ್ಘಟನೆ ಸಂಭಿಸಿದ್ದು, ಏಳು ಮಂದಿ ಭಕ್ತರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಶ್ರಾವಣ ಮಾಸದ ಸೋಮವಾರ ಹಾಗೂ ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಜಲಾಭಿಷೇಕಕ್ಕಾಗಿ ಅಶೋಕ ಧಾಮ ಶಿವ ದೇವಾಲಯಕ್ಕೆ ಆಗಮಿಸಿದ್ದರು. ಬೆಳಗಿನ ವೇಳೆ ಏಕಾಏಕಿ ಜನಸಂದಣಿ ಹೆಚ್ಚಾದ ಪರಿಣಾಮ ಕಾಲ್ತುಳಿತ ಉಂಟಾಗಿದೆ. ಈ ದುರ್ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸದ್ಯ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಇನ್ನು ಸ್ಥಳೀಯ ಪೊಲೀಸರು ಹಾಗೂ ಜಿಲ್ಲಾಡಳಿತ ಸಿಬ್ಬಂದಿ ದೇವಾಲಯದಲ್ಲಿ ಸೃಷ್ಟಿಯಾಗಿದ್ದ ಅವ್ಯವಸ್ಥೆಯನ್ನು ಸರಿಪಡಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಸದ್ಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಅಶೋಕ ಧಾಮ ದೇವಾಲಯಕ್ಕೆ ಶ್ರಾವಣ ಮಾಸದಲ್ಲಿ ಪ್ರತಿವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಇದೇ ದೇವಾಲಯದಲ್ಲಿ 2019ರಲ್ಲೂ ಕಾಲ್ತುಳಿತ ಸಂಭವಿಸಿ ಓರ್ವ ಭಕ್ತ ಮೃತಪಟ್ಟ ಘಟನೆ ನಡೆದಿತ್ತು.







