ಬೆಳಗಾವಿ : ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಿರತರಾಗಿದ್ದಾರೆ. ಪ್ರಜಾಧ್ವನಿ ಯಾತ್ರೆಯ ಮೂಲಕ ರಾಜ್ಯದ ಜನರಿಗೆ ಹತ್ತಿರವಾಗಲು ಕಾಂಗ್ರೆಸ್ ನಾಯಕರು ಪ್ಲಾನ್ ಮಾಡ್ತಿದ್ದಾರೆ. ಚುನಾವಣಾ ಪೂರ್ವ ಸಮೀಕ್ಷೆಗಳು ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಿದೆ ಎಂದು ಅಂದಾಜಿಸಿರುವ ಹಿನ್ನೆಲೆಯಲ್ಲಿ ‘ಕೈ ’ ನಾಯಕರ ಹುಮ್ಮಸ್ಸು ಹೆಚ್ಚಾಗಿದೆ. ಈ ಎಲ್ಲದರ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಬೆಳಗ್ಗೆ 11 ಗಂಟೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಬೆಳಗಾವಿಯಲ್ಲಿ ಈ ಸುದ್ದಿಗೋಷ್ಠಿ ನಡೆಯಲಿದ್ದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ., ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಈ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಲಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಈ ರೀತಿ ದಿಢೀರ್ ಸುದ್ದಿಗೋಷ್ಠಿ ಕರೆದಿರೋದು ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚಾವತಾರ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸಿದ್ದರಾಮಯ್ಯ ಮಾತನಾಡುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗ್ತಿದೆ. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಆರೋಪ ಮಾಡುತ್ತಲೇ ಬಂದಿತ್ತು. ಇದೀಗ ಬಿಜೆಪಿ ಶಾಸಕನ ಪುತ್ರ ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರೋದು ವಿಪಕ್ಷಗಳಿಗೆ ಕೇಸರಿ ಪಾಳಯದ ವಿರುದ್ಧ ದೊಡ್ಡ ಅಸ್ತ್ರ ಸಿಕ್ಕಂತಾಗಿದೆ.
ಇಂದು 11 ಗಂಟೆಗೆ ಸುದ್ದಿಗೋಷ್ಠಿ ಕರೆದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಹೊಸ ಬಾಂಬ್ ಸಿಡಿಸಬಹುದೇ ಎಂಬ ಗುಮಾನಿ ಕೂಡ ಮೂಡಿದೆ. ಹೀಗಾಗಿ ಸಿದ್ದರಾಮಯ್ಯ ಸುದ್ದಿಗೋಷ್ಠಿಯತ್ತ ಎಲ್ಲರ ಚಿತ್ತ ನೆಟ್ಟಿದೆ. ನಿನ್ನೆ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಬಂಧನವಾಗುತ್ತಿದ್ದಂತೆಯೇ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸಿಎಂ ಬೊಮ್ಮಾಯಿ ಎಲ್ಲದ್ದಕ್ಕೂ ಸಾಕ್ಷಿ ಕೇಳುತ್ತಿದ್ದರು. ಈಗ ಲೋಕಾಯುಕ್ತ ಪೊಲೀಸರೇ ಬಿಜೆಪಿ ಶಾಸಕರ ಲಂಚಾವತಾರವನ್ನು ಸಾಕ್ಷಿ ಸಮೇತ ಬಿಚ್ಚಿದ್ದಾರೆ. ಈಗ ಯಾರು ರಾಜೀನಾಮೆ ಕೊಡ್ತೀರಿ..? ಅಂತಾ ಪ್ರಶ್ನೆ ಮಾಡಿದ್ದರು .