ಬೆಳಗಾವಿ ಗಡಿ ವಿವಾದದ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಸೋಮವಾರ ಸಭೆ ನಡೆಸಿರುವ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಸರ್ವಪಕ್ಷಗಳ ಸಭೆ ಕರೆಯುವಂತೆ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದು ಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರವು ಎಚ್ಚೆತ್ತುಕೊಂಡು ತಕ್ಷಣ ಸರ್ವಪಕ್ಷಗಳ ಸಭೆ ಕರೆದು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕು ಎಂದಿದ್ದಾರೆ.
ಸುಪ್ರೀಂ ಕೋರ್ಟ್ನಲ್ಲಿ ತಮ್ಮ ರಾಜ್ಯ ಮಂಡಿಸಬೇಕಾದ ವಾದದ ಬಗ್ಗೆ ಸಮಾಲೋಚನೆ ನಡೆಸಲು ವಿರೋಧ ಪಕ್ಷಗಳ ಸದಸ್ಯರನ್ನೊಳಗೊಂಡ ಸಮಿತಿ ರಚಿಸಿರುವುದು ಆ ರಾಜ್ಯ ಗಡಿವಿವಾದವನ್ನು ಎಷ್ಟೊಂದು ಗಂಭೀರವಾಗಿ ಸ್ವೀಕರಿಸಿದೆ ಎನ್ನುವುದಕ್ಕೆ ಸಾಕ್ಷಿ.
ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗೆ ಬದ್ಧವಾಗಿ ರಾಜ್ಯ ಬಿಜೆಪಿ ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ನಮ್ಮ ಪಕ್ಷ ಬೆಂಬಲಿಸುತ್ತದೆ. ಕಾಲವ್ಯಯ ಮಾಡದೆ ಮುಖ್ಯಮಂತ್ರಿಗಳು ವಿರೋಧ ಪಕ್ಷಗಳ ಸಭೆ ಕರೆದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ.