ಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಇದೀಗ ನಿರ್ಣಾಯಕ ಹಂತ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲರು ಅಧಿಕೃತವಾಗಿ ಅಂಗೀಕರಿಸಿರುವುದರಿಂದ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಂಡಿವೆ.ನಿನ್ನೆ (ಮೇ 28) ಬೆಳಗ್ಗೆ ನಡೆದ ಮಹತ್ವದ ಬ್ರೇಕ್‌ಫಾಸ್ಟ್ ಸಭೆಯ ಬಳಿಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ತ್ಯಜಿಸುವ ನಿರ್ಧಾರವನ್ನು ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ತಿಳಿಸಿದ್ದರು. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಸಭೆಯ ಬಳಿಕ ಸಿದ್ದರಾಮಯ್ಯ ಅವರು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ಅಧಿಕೃತ ರಾಜೀನಾಮೆ ಪತ್ರ ಸಲ್ಲಿಸಿದರು. ನಂತರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ವಿಶೇಷ ವಿವೇಚನಾ ಅಧಿಕಾರ ಬಳಸಿಕೊಂಡು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎನ್ನಲಾಗಿದೆ.
ಈ ಬೆಳವಣಿಗೆಯೊಂದಿಗೆ ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಂತಾಗಿದೆ. ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಘೋಷಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಸೋಮವಾರವೇ ಪ್ರಮಾಣವಚನ ಸಮಾರಂಭ ನಡೆಯಬಹುದು ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ.

ಇದೀಗ ಕಾಂಗ್ರೆಸ್ ಹೈಕಮಾಂಡ್ ಮುಂದಿನ ರಾಜಕೀಯ ಸಮೀಕರಣಗಳತ್ತ ಗಮನ ಹರಿಸಿದೆ. ಸಚಿವ ಸಂಪುಟ ಪುನರ್‌ರಚನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಪ್ರಾದೇಶಿಕ ಸಮತೋಲನದ ಲೆಕ್ಕಾಚಾರಗಳು ತೀವ್ರ ಚರ್ಚೆಗೆ ಕಾರಣವಾಗಿವೆ.ಸಿದ್ದರಾಮಯ್ಯ ರಾಜೀನಾಮೆ ವಿಚಾರ ಕಾಂಗ್ರೆಸ್ ಒಳಗೇ ಭಿನ್ನಾಭಿಪ್ರಾಯಕ್ಕೂ ಕಾರಣವಾಗಿದೆ. ಅಹಿಂದ ವರ್ಗದ ನಾಯಕತ್ವಕ್ಕೆ ಅನ್ಯಾಯವಾಗಿದೆ ಎಂಬ ಆಕ್ರೋಶ ಕೆಲ ನಾಯಕರಿಂದ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಹಲವು ನಾಯಕರು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ಹೊರಹಾಕುತ್ತಿದ್ದಾರೆ.
ಇನ್ನೊಂದೆಡೆ, ಡಿಕೆ ಶಿವಕುಮಾರ್ ಬೆಂಬಲಿಗರು “ಪಕ್ಷ ಸಂಘಟನೆಗಾಗಿ ದುಡಿದ ನಾಯಕನಿಗೆ ನ್ಯಾಯ ಸಿಕ್ಕಿದೆ” ಎಂದು ಸಂಭ್ರಮಾಚರಣೆ ಆರಂಭಿಸಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್, ಬ್ಯಾನರ್‌ಗಳ ಮೂಲಕ ಡಿಕೆಶಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ರಾಜಕೀಯ ವಿಶ್ಲೇಷಕರ ಪ್ರಕಾರ, ಈ ನಾಯಕತ್ವ ಬದಲಾವಣೆ 2028ರ ವಿಧಾನಸಭೆ ಚುನಾವಣೆಯ ದೃಷ್ಟಿಯಿಂದ ಕಾಂಗ್ರೆಸ್‌ಗೆ ದೊಡ್ಡ ತಿರುವಾಗಬಹುದು. ಒಂದು ಕಡೆ ಆಡಳಿತದ ನಿರಂತರತೆ ಉಳಿಸುವ ಸವಾಲಿದ್ದರೆ, ಮತ್ತೊಂದು ಕಡೆ ಸಾಮಾಜಿಕ ಸಮತೋಲನ ಕಾಪಾಡುವ ಒತ್ತಡವೂ ಹೈಕಮಾಂಡ್ ಎದುರಿಸುತ್ತಿದೆ.
ಸಿದ್ದರಾಮಯ್ಯ ಅವರ ರಾಜೀನಾಮೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ಮುಂದಿನ ಕೆಲವು ದಿನಗಳು ಕರ್ನಾಟಕ ರಾಜಕೀಯದ ದಿಕ್ಕನ್ನೇ ನಿರ್ಧರಿಸುವಂತಾಗಿವೆ.






