ಕರ್ನಾಟಕದ ಮುಂದಿನ ಸಿಎಂ ಅಭ್ಯರ್ಥಿ ಯಾರೆಂಬ ಪ್ರಶ್ನೆಗೆ ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನೀಡಿದ್ದರು. ಅಂತಿಮವಾಗಿ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮಣೆ ಹಾಕಿದೆ. ಇಂದು ಸಂಜೆ ಅಧಿಕೃತ ಪ್ರಕಟಣೆ ಹೊರಡಿಸುವ ಸಾಧ್ಯತೆಗಳಿವೆ.


ನಾಳೆ ಪ್ರಮಾಣ ವಚನ?: ನೂತನವಾಗಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಹೆಸರನ್ನು ಘೋಷಿಸಿದ ನಂತರ ನಾಳೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಡಿಕೆಶಿಗೆ ಉಪ ಮುಖ್ಯಮಂತ್ರಿ ಪಟ್ಟ?: ಸಿಎಂ ಸ್ಥಾನಕ್ಕೆ ಪ್ರಬಲ ಪೈಪೋಟಿ ನೀಡಿದ್ದ ಡಿ ಕೆ ಶಿವಕುಮಾರ್ ಹೈಕಮಾಂಡ್ ಮನವೊಲಿಕೆ ನಂತರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಒಪ್ಪಿಕೊಂಡಿದ್ದು ಅದರ ಜೊತೆಗೆ ಇನ್ನೆರಡು ಪ್ರಮುಖ ಖಾತೆಗಳಿಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಅಧ್ಯಕ್ಷ ಹುದ್ದೆ ಜೊತೆ ಇಂಧನ ಮತ್ತು ನೀರಾವರಿ ಖಾತೆ ಮೇಲೆ ಡಿಕೆ ಶಿವಕುಮಾರ್ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿಯೂ ಡಿಕೆಶಿ ಮುಂದುವರಿಯಲಿದ್ದಾರೆ.