ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ದೆಹಲಿಯ ಜಾರಿ ನಿರ್ದೇಶನಾಲಯದ ಕಚೇರಿಗೆ ಆಗಮಿಸಿದ್ದಾರೆ ಎಂದು ವರದಿ ಮಾಡಿದೆ.
ಈ ನಡುವೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸದಸ್ಯರು ಇಡಿ ಸಮನ್ಸ್ ವಿರುದ್ಧ ಪ್ರತಿಭಟಿಸಿದರು. ಪಕ್ಷವು ಈ ಹಿಂದೆ ರಾಜ್‌ಘಾಟ್‌ನಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿತ್ತು ಆದರೆ ಅಧಿಕಾರಿಗಳಿಂದ ಅನುಮತಿ ಪಡೆಯಲು ಸಾಧ್ಯವಾಗಲಿಲ್ಲ.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕಳೆದ ವಾರ ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತೆ ಜುಲೈ 25ಕ್ಕೆ ವಿಚಾರಣೆಗೆ ಬರುವಂತೆ ಸಮನ್ಸ್ ಜಾರಿ ಮಾಡಿದ್ದರು. ಆದರೆ ಮತ್ತೆ ದಿನಾಂಕ ಬದಲು ಮಾಡಿ ಜುಲೈ 26ಕ್ಕೆ ವಿಚಾರಣೆಗೆ ಬರುವಂತೆ ಸೂಚಿಸಿದ್ದರು. ಇಡಿ ಅಧಿಕಾರಿಗಳ ಸೂಚನೆಯಂತೆ ಸೋನಿಯಾ ಗಾಂಧಿ ಅವರು ಇಂದು ವಿಚಾರಣೆಗೆ ಹಾಜರಾಗಿದ್ದಾರೆ.