ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲದ ವಿಶೇಷ ಜಂಟಿ ಅಧಿವೇಶನ ಆರಂಭವಾಗಲಿದೆ. ಈ ವಿಶೇಷ ಅಧಿವೇಶನದಲ್ಲಿ ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ನಡುವೆ ವಿಬಿ ಜಿ ರಾಮ್ ಜಿ ಯೋಜನೆ(VB–G RAM G Bill) ವಿಚಾರಕ್ಕೆ ಜಟಾಪಟಿ ನಡೆಯುವ ಸಾಧ್ಯತೆ ಇದೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಹೆಸರು ಮತ್ತು ಕೆಲವು ನಿಯಮಗಳನ್ನ ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಬದಲಾಯಿಸಿದೆ. ಹೀಗಾಗಿ ಕೇಂದ್ರ ಸರ್ಕಾರ ವಿಬಿ-ಜಿ ರಾಮ್ ಜಿ ಕಾಯ್ದೆ ಹಿಂಪಡೆಯಬೇಕು ಎಂದು ಒತ್ತಾಯಿಸಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ನಿರ್ಣಯವನ್ನು ಅಂಗೀಕರಿಸಲು ವಿಶೇಷ ಅಧಿವೇಶನ ಕರೆದಿದೆ.

ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿತ್ತು. ಅಲ್ಲದೆ, ಈ ಕಾಯ್ದೆ ವಿರುದ್ಧ ಕಾನೂನು ಹೋರಾಟ ನಡೆಸುವ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿತ್ತು.

ಅಧಿವೇಶನದಲ್ಲಿ ವಿಬಿ ಜಿ ರಾಮ್ ಜಿ ಯೋಜನೆ ವಿಚಾರ ಹೊರತುಪಡಿಸಿ ಇನ್ನೂ ಅನೇಕ ವಿಚಾರಗಳು ಚರ್ಚೆಯಾಗಲಿದೆ. ಅಬಕಾರಿ ಡಿಸಿ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿರುವುದು, ಕೋಗಿಲು ವಸತಿ ಗಲಾಟೆ ಸೇರಿದಂತೆ ಪ್ರಮುಖ ಸಮಸ್ಯೆಗಳ ಬಗ್ಗೆ ಆಡಳಿತ ಮತ್ತು ವಿಪಕ್ಷಗಳ ಬಗ್ಗೆ ಜಟಾಪಟಿ ಸಾಧ್ಯತೆ ಇದೆ












