
ಅನಾರೋಗ್ಯದ ಕಾರಣ ಚಾಮರಾಜನಗರ ಬಿಜೆಪಿ ಸಂಸದ ವಿ ಶ್ರೀನಿವಾಸಪ್ರಸಾದ್ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ರಾತ್ರಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರಿಗೆ ಐಸಿಯುವಿನಲ್ಲಿ ವೆಂಟಿಲೇಟರ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೆರಡು ದಿನಗಳು ಐಸಿಯುನಲ್ಲೇ ಚಿಕಿತ್ಸೆ ಮುಂದುವರೆಯಲಿದೆ. ನಂತರ ವಾರ್ಡ್ಗೆ ಶಿಫ್ಟ್ ಮಾಡಲಾಗುವುದು ಎಂದು ಬಲ್ಲಾಳ್ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಶ್ರೀ ನಿವಾಸ್ ಪ್ರಸಾದ್ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಮಧ್ಯೆ, ಶ್ರೀ ನಿವಾಸ್ ಪ್ರಸಾದ್ ಅಳಿಯ ಧೀರಜ್ ಪ್ರಸಾದ್ ಮತ್ತು ಸಹೋದರ ಕಾಂಗ್ರೆಸ್ ಸೇರಿದ್ದರು. ಇದು ಚಾಮರಾಜನಗರ ರಾಜಕೀಯದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿತ್ತು.

ಕಾಲಿನಲ್ಲಿ ಗಾಯ ಉಲ್ಬಣಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಸುದರ್ಶನ್ ಬಲ್ಲಾಳ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ.2013 ರಿಂದ 2016 ರವರೆಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ಪರ್ಧಿಸಿ 11 ಬಾರಿ ಜಯಗಳಿಸಿದ್ದಾರೆ.ಸದ್ಯ ರಾಜಕೀಯದಿಂದ ಪ್ರಸಾದ್ ನಿವೃತ್ತಿ ಪಡೆದಿದ್ದಾರೆ.