ಬೆಂಗಳೂರು: ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಬೈಕ್ ಟ್ಯಾಕ್ಸಿಗಳ ವಿರುದ್ಧ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಬೈಕ್‌ಗಳನ್ನು ಟ್ಯಾಕ್ಸಿಗಳಾಗಿ ಬಳಸಲು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಸ್ಪಷ್ಟಪಡಿಸಿದೆ.

ಬೈಕ್ ಟ್ಯಾಕ್ಸಿಗೆ ಸರ್ಕಾರದ ವಿರೋಧ ಏಕೆ?
ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ದ್ವಿಚಕ್ರ ವಾಹನಗಳನ್ನು ವಾಣಿಜ್ಯ ಉದ್ದೇಶಕ್ಕೆ ಟ್ಯಾಕ್ಸಿಗಳಾಗಿ ಬಳಸುವುದಕ್ಕೆ ಸರ್ಕಾರ ವಿರೋಧ ವ್ಯಕ್ತಪಡಿಸಿದೆ. ಬೈಕ್ ಟ್ಯಾಕ್ಸಿಗಳಿಂದ ಪ್ರಯಾಣಿಕರ ಸುರಕ್ಷತೆಗೆ ಸಮಸ್ಯೆಯಾಗಬಹುದು ಎಂಬುದು ಸರ್ಕಾರದ ಪ್ರಮುಖ ವಾದವಾಗಿದೆ. ಅಲ್ಲದೇ ಇಂತಹ ವಾಹನಗಳಿಗೆ ಸೂಕ್ತವಾದ ವಿಮಾ ರಕ್ಷಣೆ ಇರುವುದಿಲ್ಲ ಎಂದು ಸರ್ಕಾರ ಹೇಳಿದೆ.

ದ್ವಿಚಕ್ರ ವಾಹನಗಳಲ್ಲಿ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿದ್ದು, ಅಪಘಾತಗಳಿಂದ ಸಾವು-ನೋವುಗಳ ಪ್ರಮಾಣವೂ ಹೆಚ್ಚಾಗಿದೆ. ಹೀಗಾಗಿ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಬಾರದು ಎಂದು ಸರ್ಕಾರ ತಿಳಿಸಿದೆ. ಇದರ ಜೊತೆಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ‘ಬೈಕ್ ಟ್ಯಾಕ್ಸಿ’ಗೆ ಸಂಬಂಧಿಸಿದಂತೆ ಸ್ಪಷ್ಟವಾದ ವ್ಯಾಖ್ಯಾನ ಅಥವಾ ನಿಯಮಗಳು ಇಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಒಂದೇ ದಿನದಲ್ಲಿ 85ಕ್ಕೂ ಹೆಚ್ಚು ಬೈಕ್‌ಗಳು ಜಪ್ತಿ
ಒಂದೆಡೆ ಬೈಕ್ ಟ್ಯಾಕ್ಸಿ ವಿಚಾರ ಸುಪ್ರೀಂಕೋರ್ಟ್‌ನಲ್ಲಿರುವ ಬೆನ್ನಲ್ಲೇ, ಮತ್ತೊಂದೆಡೆ ಸಾರಿಗೆ ಇಲಾಖೆ ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿದೆ. ಓಲಾ, ಊಬರ್, ರಾಪಿಡೋ ಸೇರಿದಂತೆ ವಿವಿಧ ಆ್ಯಪ್‌ಗಳ ಮೂಲಕ ಕಾರ್ಯಾಚರಿಸುತ್ತಿರುವ ಬೈಕ್ ಟ್ಯಾಕ್ಸಿಗಳ ಮೇಲೆ ಆರ್‌ಟಿಒ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ಬೆಂಗಳೂರಿನ ಕೋರಮಂಗಲ ಆರ್‌ಟಿಒ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಒಂದೇ ದಿನ 85ಕ್ಕೂ ಹೆಚ್ಚು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.







