ಬೆಂಗಳೂರು : ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ಎಸಗಿದ ಪ್ರಕರಣದಲ್ಲಿ ಎ 1 ಆರೋಪಿ ಎನಿಸಿರುವ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ಗೆ ಬಿಗ್ ರಿಲೀಫ್ ಸಿಕ್ಕಿದೆ. ಸದ್ಯ ಲೋಕಾಯುಕ್ತ ಪೊಲೀಸರ ಕೈಗೆ ಸಿಗದೇ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ಗೆ ರಾಜ್ಯ ಹೈಕೋರ್ಟ್ನ ಏಕ ಸದಸ್ಯ ಪೀಠ ಮಧ್ಯಂತರ ಜಾಮೀನು ನೀಡಿದೆ.
ಬಿಜೆಪಿ ಶಾಸಕ ಪರ ವಕೀಲ ಮಂಡಿಸಿದ ವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ಕೆ. ನಟರಾಜನ್ 5 ಲಕ್ಷ ರೂಪಾಯಿ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇರೆಗೆ ಮಧ್ಯಂತರ ಜಾಮೀನು ನೀಡಲಾಗುವುದು ಎಂದು ತೀರ್ಪು ಪ್ರಕಟಿಸಿದ್ದಾರೆ. ಈ ಪ್ರಕರಣ ಸಂಬಂಧ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಲಾಗಿದೆ.
ಬಿಜೆಪಿ ಶಾಸಕ ವಿರೂಪಾಕ್ಷಪ್ಪರಿಗೆ 75 ವರ್ಷ ವಯಸ್ಸಾಗಿದ್ದು ಹೃದ್ರೋಗದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವಿರೂಪಾಕ್ಷಪ್ಪ ಪರ ವಕೀಲರು ಕೋರ್ಟ್ ಎದುರು ಹೇಳಿದ್ದಾರೆ. ಆದರೆ ಈ ವಿಚಾರಗಳನ್ನು ಕೋರ್ಟ್ಗೆ ಸಲ್ಲಿಸಲಾದ ಅರ್ಜಿಯನ್ನು ಉಲ್ಲೇಖ ಮಾಡಿಲ್ಲ ಎಂದು ನ್ಯಾಯಮೂರ್ತಿಗಳು ಪ್ರಶ್ನೆ ಮಾಡಿದ್ದಾರೆ. ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸುವವರೆಗೂ ಈ ಮಧ್ಯಂತರ ಜಾಮೀನು ಇರಲಿದೆ ಎಂದು ರಾಜ್ಯ ಹೈಕೋರ್ಟ್ ತಿಳಿಸಿದೆ.
ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಕಾರ್ಯಾದೇಶ ನೀಡಲು ಮಾರ್ಚ್ 3ರಂದು ಕ್ರೆಸೆಂಟ್ ರಸ್ತೆಯಲ್ಲಿರುವ ಖಾಸಗಿ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಸರ್ಕಾರಿ ಅಧಿಕಾರಿ ಪ್ರಶಾಂತ್ ಮಾಡಾಳ್ರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಇದಾದ ಬಳಿಕ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಶೋಧ ಕಾರ್ಯ ನಡೆಸಿದ ಲೋಕಾಯುಕ್ತ ಪೊಲೀಸರಿಗೆ 7 ಕೋಟಿ ರೂಪಾಯಿ ನಗದು ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಎ1 ಆರೋಪಿಯಾಗಿದ್ದಾರೆ.