ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದರು. ರಾಜ್ಯಪಾಲರ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ರಾಜ್ಯಪಾಲರ ಅನುಮತಿಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಇದೀಗ ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಕ್ಕಂತಾಗಿದೆ.
ಹೈಕೋರ್ಟ್ ಆದೇಶದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭವಾಗಿದೆ. ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಬಡವರ ಸೈಟ್ ನುಂಗಿದ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಮಾಡಲಾಗಿದೆ. ಬಿಜೆಪಿ ನಾಯಕ ಅರವಿಂದ್ ಬೆಲ್ಲದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಸಿದ್ದರಾಮಯ್ಯ ರಾಜೀನಾಮೆಗೆ ವಿಧಾನಸಭಾ ಉಪನಾಯಕನೂ ಆಗಿರುವ ಅರವಿಂದ್ ಬೆಲ್ಲದ್ ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲೂ ರಾಜೀನಾಮೆಗೆ ಆಗ್ರಹ ಕೇಳಿ ಬಂದಿದೆ. ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ ತೊಲಗಲಿ ತೊಲಗಲಿ ಕಾಂಗ್ರೆಸ್ ತೊಲಗಲಿ ಎಂದು ಪ್ರತಿಭಟನೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ಬೇಕು ಅಂತಾ ಕೃಷ್ಣರಾಜ ಶಾಸಕ ಶ್ರೀವತ್ಸ ಆಗ್ರಹ ಮಾಡಿದ್ದಾರೆ.
ಮಲೆನಾಡು ಶಿವಮೊಗ್ಗದಲ್ಲೂ ಬಿಜೆಪಿ ನಗರ ಘಟಕದಿಂದ ಪ್ರತಿಭಟನೆ ಮಾಡಲಾಗಿದೆ. ಸಂಸದ ರಾಘವೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ನೀಡಿ, ಮನೆಗೆ ನಡೀರಿ ಎಂಬ ಘೋಷ ವಾಕ್ಯ ಮೊಳಗಿಸಿದ್ದಾರೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡ್ಬೇಕು ಅಂತಾ ಬಿಜೆಪಿ ನಾಯಕರು ಪ್ರತಿಭಟನೆ ವೇಳೆ ಒತ್ತಾಯಿಸಿದ್ದಾರೆ.
ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಮಾಡಲಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಭುವನೇಶ್ವರಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ರಾಷ್ಟ್ರೀಯ ಹೆದ್ದಾರಿ ತಡೆಯಲಾಗಿದೆ. ಭ್ರಷ್ಟ ಕಾಂಗ್ರೆಸ್ ಸರ್ಕಾರ ಎಂದು ಬಿಜೆಪಿನಾಯಕರು ಆರೋಪ ಮಾಡಿದ್ದಾರೆ.